

ರಾಯಚೂರು: ತಮ್ಮ ಅಧ್ಯಾತ್ಮಿಕ ಚಿಂತನೆಗಳ ಮೂಲಕ ಸಮ ಸಮಾಜವನ್ನು ಕಟ್ಟುವಲ್ಲಿ ಶಿವಯೋಗಿ ಸಿದ್ಧರಾಮೇಶ್ವರರ ಕೊಡುಗೆ ಅಪಾರವಾಗಿದ್ದು, ಅವರ ಚಿಂತನೆ, ತತ್ತ್ವಾದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಸುರೇಶ ವರ್ಮಾ ಹೇಳಿದರು.
ಸ್ಥಳೀಯ ಕನ್ನಡ ಭವನದಲ್ಲಿ ಜಿಲ್ಲಾಡಳಿತದಿಂದ ಸೋಮವಾರ ಏರ್ಪಡಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲ್ಲರೂ ಸಮಾನರು ಎಂಬ ಸಂದೇಶವನ್ನು ನೀಡುವುದರ ಜತೆಗೆ ಜನರಲ್ಲಿ ಕಾಯಕ ಪ್ರಜ್ಞೆ ಮೂಡಿಸುವ ಕೆಲಸವನ್ನು ಸಿದ್ಧರಾಮೇಶ್ವರರು ಮಾಡಿದ್ದರು ಎಂದರು.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ಅವರ ಭವಿಷ್ಯ ಸುಂದರವಾಗಿರಲು ಸಾಧ್ಯವಾಗಲಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಶಿಕ್ಷಕ ಆಂಜಿನೇಯ ಉಪನ್ಯಾಸ ನೀಡಿ, ಭಾರತ ಸಾಧು ಸಂತರು, ಶರಣರು, ತತ್ತ್ವಜ್ಞಾನಿಗಳು, ಚಿಂತಕರು ಹುಟ್ಟಿದ ಪುಣ್ಯಭೂಮಿಯಾಗಿದೆ. ಬಾಲ್ಯದಿಂದಲೂ ದೈವತ್ವ ಮಾರ್ಗದಲ್ಲಿ ನಡೆದ ಸಿದ್ಧರಾಮೇಶ್ವರರು ಸಮಾಜಕ್ಕೆ ಉತ್ತಮ ಮಾರ್ಗದರ್ಶನವನ್ನು ಹಾಕಿಕೊಟ್ಟಿದ್ದಾರೆ ಎಂದರು.
ಇದಕ್ಕೂ ಮೊದಲು ಮಂತ್ರಾಲಯ ರಸ್ತೆಯಲ್ಲಿರುವ ಸಿದ್ಧರಾಮೇಶ್ವರ ಪುತ್ಥಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ಕನ್ನಡ ಭವನದವರೆಗೆ ಸಿದ್ದರಾಮೇಶ್ವರರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಚಿವ ಎನ್.ಎಸ್.ಬೋಸರಾಜು, ಶಾಸಕ ಬಸನಗೌಡ ದದ್ದಲ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಸಮಾಜದ ಮುಖಂಡರಾದ ರಾಮು ಆಲ್ಕೂರು, ಹನುಮಂತಪ್ಪ, ಶಶಿಕಲಾ ಭೀಮರಾಯ ಉಪಸ್ಥಿತರಿದ್ದರು.