ವಚನಕಾರರ ಸಂದೇಶ ಬದಲಾವಣೆಗೆ ಪೂರಕ ; ಸಿದ್ದರಾಮೇಶ್ವರ ಜಯಂತಿಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅಭಿಪ್ರಾಯ

18cbp1
Published on

ಚಿಕ್ಕಬಳ್ಳಾಪುರ: ವಚನಕಾರರ ಒಳ್ಳೆಯ ಚಿಂತನೆಯ ಸಂದೇಶಗಳು ಸವಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ಪೂರಕ ಎಂದು ಜಿಲ್ಲಾಧಿಕಾರಿ ಆರ್.ಲತಾ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಸೋಮವಾರ ಏರ್ಪಡಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಉದ್ಘಾಟಿಸಿ ಮಾತನಾಡಿದರು. 12ನೇ ಶತಮಾನದಲ್ಲಿದ್ದ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿದ ವಚನ ಚಳವಳಿಕಾರರಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಪ್ರಮುಖರು. ವಚನಗಳ ಮೂಲಕ ನೀಡಿದ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು. ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರವು ಹಲವು ಕಲ್ಯಾಣ ಕಾರ್ಯಕ್ರಮಗಳ ಮೂಲಕ ಸವಲತ್ತುಗಳನ್ನು ಒದಗಿಸುತ್ತಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಜಿಪಂ ಮಾಜಿ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ ಮಾತನಾಡಿ, ಕರ್ಮಯೋಗಿ ಸಿದ್ದರಾಮೇಶ್ವರರು ಸಮಾಜದ ಸುಧಾರಣೆ ಸೇವೆಯಲ್ಲಿ ಬದುಕಿನ ಸಿದ್ಧಿ ಕಂಡುಕೊಂಡವರು. ಎಲ್ಲ ಸಮುದಾಯದವರನ್ನು ಒಗ್ಗೂಡಿಸಿ ಕಲ್ಯಾಣಿ, ಕೆರೆ ಕಟ್ಟೆಗಳನ್ನು ನಿರ್ಮಿಸಿದರು. ಮಹಿಳೆಯರ ಸಮಾನತೆಗಾಗಿ ಧ್ವನಿ ಎತ್ತಿದ ಜತೆಗೆ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದರು. ಇಂತಹ ವ್ಯಕ್ತಿಯನ್ನು ನಿರಂತರವಾಗಿ ಸ್ಮರಿಸಿ, ಅವರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದರು.

ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಗೌರವ ಸಮರ್ಪಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್, ಜಿ.ಪಂ.ವಾಜಿ ಸದಸ್ಯ ಶ್ರೀನಿವಾಸ್, ಮುಖಂಡರಾದ ಶ್ರೀನಿವಾಸ ಬಾಬು, ನಾರಾಯಣಸ್ವಾಮಿ ಮತ್ತಿತರರು ಇದ್ದರು.

ವಿವಿಧ ಬೇಡಿಕೆ ಈಡೇರಿಕೆಗೆ ಮನವಿ: ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾಗೆ ಜಿಲ್ಲಾ ಬೋವಿ ಸಮಾಜ ಸಂಘವು ಜನಾಂಗದ ಸಾವಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಯೋಜನೆಗಳಡಿ ಅರ್ಹರಿಗೆ ಸೂರು, ಪ್ರೋತ್ಸಾಹಧನ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಮನವಿ ಪತ್ರ ಸಲ್ಲಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ, ಜನಾಂಗಗಳ ಸಮಸ್ಯೆಗಳ ಪರಿಹಾರ ಮತ್ತು ಸವಲತ್ತುಗಳ ವಿತರಣೆಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net