ಜಿಲ್ಲೆಯಲ್ಲಿ ಏಕಕಾಲಕ್ಕೆ ಲಸಿಕೆ ಸಪ್ತಾಹ ಕಾರ್ಯಕ್ರಮ ರೂಪಿಸಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚನೆ, ಜಿಲ್ಲಾಮಟ್ಟದ ಲಸಿಕಾ ಕಾರ್ಯಪಡೆ ಸಭೆ

dc lasike
Published on

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಲಸಿಕೆ ಸಪ್ತಾಹ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.

ದೇವನಹಳ್ಳಿ ತಾಲೂಕು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು.

ಲಸಿಕೆ ಸಪ್ತಾಹದ ಮೂಲಕ ಆರೋಗ್ಯ ಇಲಾಖೆಯಿಂದ ಮಕ್ಕಳ ಆರೋಗ್ಯ ವರ್ಧನೆಗೆ ನೀಡುವ ವಿವಿಧ ಲಸಿಕೆಯಿಂದ ಹೊರತಾದ ಮಕ್ಕಳಿಗೆ ಲಸಿಕೆ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬೇಕು. ಇದಕ್ಕಾಗಿ ಅಗತ್ಯವಿರುವ ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಹಾಗೂ ಜಿಲ್ಲೆಯ ಮಕ್ಕಳ ಆರೋಗ್ಯ ಸ್ಥಿತಿ ಕಾಪಾಡಿಕೊಳ್ಳಲು, ಆರೋಗ್ಯ ಕಾರ್ಯಕರ್ತರು ಹಾಗೂ ತಾಲೂಕಿನ ವೈದ್ಯಾಧಿಕಾರಿಗಳನ್ನು ಒಳಗೊಂಡ ಜಿಲ್ಲಾ ಹಾಗೂ ತಾಲೂಕು ಲಸಿಕಾ ಕಾರ್ಯ ಪಡೆ ಕಾರ್ಯೋನ್ಮುಖವಾಗಬೇಕು. ಇದಕ್ಕಾಗಿ ಜಿಲ್ಲಾಡಳಿಯದಿಂದ ಅಗತ್ಯ ನೆರವು ದೊರೆಯಲಿದೆ ಎಂದು ತಿಳಿಸಿದರು.

ಮರಣ ಪ್ರಮಾಣ ತಗ್ಗಬೇಕು: ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣ ಹಾಗೂ ಶಿಶುವಿನ ಮರಣ ಪ್ರಮಾಣ ನಿಂಯತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು, ಗರ್ಭಿಣಿಯರಿಗೆ ರಕ್ತಹೀನತೆ ತಡೆಗೆ ಮುಂಜಾಗ್ರತೆ ವಹಿಸಿ ಕಬ್ಬಿಣಾಂಶದ ಮಾತ್ರೆಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ರವೀಂದ್ರ ತಿಳಿಸಿದರು.

ಸಾರ್ವಜನಿಕರಲ್ಲಿ ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ನೀಡುವ ಮೂಲಕ ಹೆಚ್ಚು ಜಾಗೃತಿ ಮೂಡಿಸಿ, ಸಾರ್ವಜನಿಕರ ಆರೋಗ್ಯದ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ ಮಾತನಾಡಿ, ಲಸಿಕಾ ಸಪ್ತಾಹ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲೆಯ ನಾಲ್ಕೂ ತಾಲೂಕುಗಳ ತಾಲೂಕು ವೈದ್ಯಾಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಸಪ್ತಾಹ ಯಶಸ್ವಿಗೊಳಿಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net