ಜೋಳ ಖರೀದಿ ಮಿತಿ ತೆಗೆಯದಿದ್ದರೆ ಪಕ್ಷಾತೀತ ಹೋರಾಟ

26012022 basanagowda badarli
Published on

ಸಿಂಧನೂರು: ಪ್ರತಿ ರೈತರಿಗೆ 20 ಕ್ವಿಂಟಾಲ್ ಮಾತ್ರ ಜೋಳ ಖರೀದಿಗೆ ಮಿತಿ ಹಾಕಿರುವುದನ್ನು ತೆಗೆದು ಹಾಕಲು ಸಚಿವ ಸಂಪುಟ ಉಪ ಸಮಿತಿ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದರೆ ಪಕ್ಷಾತೀತ ಹೋರಾಟ ಅನಿವಾರ್ಯ ಎಂದು ಕೆಪಿಸಿಸಿ ಯುವ ಘಟಕದ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ ಹೇಳಿದರು.

ಸಚಿವ ಸಂಪುಟ ಉಪ ಸಮಿತಿ ಗುರುವಾರ ಬೆಂಗಳೂರಿನಲ್ಲಿ ಸಭೆ ನಡೆಸಿ, ಜೋಳ ಖರೀದಿ ಮಿತಿ ತೆಗೆಯಲು ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದೆಂದು ಹೇಳಿತ್ತು. ಒಂದು ವಾರವಾಗಿದ್ದು, ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು. ಇಲ್ಲದಿದ್ದರೆ ಪಕ್ಷಾತೀತವಾಗಿ ಎಲ್ಲ ಸಂಘ-ಸಂಸ್ಥೆಗಳ ಮುಖಂಡರ ಸಭೆ ಕರೆದು ಹೋರಾಟಕ್ಕೆ ನಿರ್ಧರಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ತಾಯಿ-ಮಕ್ಕಳ ಆಸ್ಪತ್ರೆಯನ್ನು ಸಿಂಧನೂರು ನಗರದಲ್ಲಿಯೇ ನಿರ್ಮಿಸಬೇಕು. ಈ ಕುರಿತು ಶಾಸಕ ಸೇರಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಕಲ್ಲೂರು ಗ್ರಾಮಸ್ಥರು ಈ ವಿಷಯದಲ್ಲಿ ರಾಜಕೀಯ ಮಾಡದೆ ತಾಳ್ಮೆಯಿಂದ ಇರಬೇಕು. ಶಾಸಕರು ಪಕ್ಷಾತೀತವಾಗಿ ಎಲ್ಲರ ಸಭೆ ಕರೆದು ಸರ್ಕಾರಿ ಜಾಗ ಎಲ್ಲೆಲ್ಲಿವೆ ಎಂದು ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದರೆ ಸಾರ್ವಜನಿಕರೊಂದಿಗೆ ಹೋರಾಟ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

542 ಸಿವಿಲ್ ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. 371 ಜೆ ಕಲಂನಡಿ ಈ ಭಾಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ವಿಶೇಷ ಸ್ಥಾನಮಾನ ನೀಡಲಾಗಿದೆ. ಆದರೆ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳು ಹೆಚ್ಚಿನ ಅಂಕ ಪಡೆದಿದ್ದರೂ ಅವರನ್ನು ಈ ಭಾಗಕ್ಕೆ ಮಾತ್ರ ಸೀಮಿತಗೊಳಿಸಿ ಫಲಿತಾಂಶ ಪ್ರಕಟಿಸಿರುವುದು ಸರಿಯಲ್ಲ. ಈ ಕುರಿತ ಲೋಪದೋಷಗಳನ್ನು ಕೂಡಲೇ ಸರಿಪಡಿಸಬೇಕು. ಈ ಭಾಗದ ಎಲ್ಲ ಜನಪ್ರತಿನಿಧಿಗಳು ಸಿಎಂ ಗಮನ ಸೆಳೆಯಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net