

ಸಿಂಧನೂರು: ಮಾದಕ ವಸ್ತುಗಳಿಗೆ ಆಕರ್ಷಿತರಾಗಿ ವಿದ್ಯಾರ್ಥಿಗಳು, ಯುವಜನರು ಜೀವನ ಹಾಳು ಮಾಡಿಕೊಳ್ಳುತ್ತಿರುವುದು ಖೇದಕರ ಸಂಗತಿ ಎಂದು ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ನಾಗರಾಜ ಕಾಟ್ವಾ ಹೇಳಿದರು.
ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಆರೋಗ್ಯ ಸಂಘ, ಆರಕ್ಷಕ-ಕಾರಾಗೃಹ ಇಲಾಖೆ, ಅಬಕಾರಿ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಸನ್‌ರೈಸ್ ಡಿ-ಫಾರ್ಮಸಿ, ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಣೆ ವಿರೋಧಿ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದ ಮಾನಸಿಕ, ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಉತ್ತಮ ಜೀವನಕ್ಕಾಗಿ ಆರೋಗ್ಯ ಕಾಪಾಡಿಕೊಳ್ಳುವುದು ಅತಿಮುಖ್ಯ ಎಂದರು.
ಶಹರ ಪೊಲೀಸ್ ಠಾಣೆ ಪಿಐ ದುರುಗಪ್ಪ ಡೊಳ್ಳಿನ್ ಮಾತನಾಡಿ, ಯಾರಾದರೂ ಮಾದಕ ವಸ್ತುಗಳನ್ನು ಸಾಗಣೆ ಮಾಡುವುದು ಕಂಡು ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿದರೆ ಕಾನೂನು ಕ್ರಮವಹಿಸಲಾಗುವುದು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ ಮಾತನಾಡಿದರು. ಉಪನ್ಯಾಸಕರಾದ ವೀರೇಶ, ಅಶುಪಾಷಾ, ಪ್ರಶಾಂತ, ದಿಲೀಪ್, ಅಖಿಲ್, ವೀರಭದ ್ರಯ್ಯಸ್ವಾಮಿ, ಮನೋಹರ್ ಬಡಿಗೇರ್, ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಸಂಗನಗೌಡ, ಎಚ್.ಎಫ್.ಹಣಗಿ, ಎಎಸ್‌ಐ ವೀರೇಶ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ ಇತರರಿದ್ದರು.