ಸಿಂಗನಾಳದಲ್ಲಿ ಸರ್ಕಾರಿ ಜಾಗ ಒತ್ತುವರಿ ತೆರವುಗೊಳಿಸಿ: ಕಾರಟಗಿಯಲ್ಲಿ ಪ್ರಾಂತ ಕೃಷಿ ಕೂಲಿಕಾರರ ಸಂಘ ಪ್ರತಿಭಟನೆ

081022 Karatagi APMC Front Farmers Protest
ಕಾರಟಗಿ ತಹಸಿಲ್ ಕಚೇರಿ ಮುಂದೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಸಿಂಗನಾಳ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು.
Published on

ಕಾರಟಗಿ: ಸಿಂಗನಾಳ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ತಾಲೂಕು ಘಟಕ ಶುಕ್ರವಾರ ತಹಸಿಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಗ್ರಾಮದಲ್ಲಿ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕ ಸೌಲಭ್ಯಗಳ ಕಟ್ಟಡಗಳ ನಿರ್ಮಾಣಕ್ಕೆ ಅನನುಕೂಲವಾಗಿದೆ. ಗ್ರಾಮದಲ್ಲಿ ಜೂ.18ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಲಾಗಿತ್ತು. ಅಲ್ಲದೆ, ಅ.3ರಂದು ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಕ್ರಮ ಕೈಗೊಂಡಿಲ್ಲ. ಗಂಗಾವತಿ-ಕಾರಟಗಿ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ಧಾರ್ಮಿಕ ಕಾರ್ಯಕ್ರಮ ನಡೆಸಲು, ಜಾನುವಾರುಗಳಿಗೆ ನೀರು ಕುಡಿಯಲು ಮತ್ತು ತೊಳೆಯಲು ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು.

ಸರ್ವೇ ನಂ. 116, 63, 7, 8 ಹಾಗೂ 10ರಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ಮತ್ತು ಸಾಗುವಳಿ ಚೀಟಿ ನೀಡಬೇಕೆಂದು ಒತ್ತಾಯಿಸಿದರು. ಒಂದುವಾರದಲ್ಲಿ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಬಳಿಕ ತಹಸೀಲ್ದಾರ್ ಎಂ.ಬಸವರಾಜಗೆ ಮನವಿ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net