ಸಿರಗುಪ್ಪದ ಮತ್ತೊಂದು ಪ್ರಕರಣ ಸೇರಿ ಬಳ್ಳಾರಿ ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆ

130520 Vims House Nurse Protest for Safety
Published on

ಬಳ್ಳಾರಿ: ಜಿಲ್ಲೆಯಲ್ಲಿ ಕರೊನಾ ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ ಜನರಲ್ಲಿ ಮತ್ತೆ ಭೀತಿ ಆವರಿಸುತ್ತಿದೆ. ಸಿರಗುಪ್ಪ ತಾಲೂಕಿನಲ್ಲಿ ಎರಡನೇ ಪ್ರಕರಣ ಬೆಳಕಿಗೆ ಬಂದಿದೆ. ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯಲ್ಲಿ ಸೋಂಕು ಪತ್ತೆಯಾಗಿರುವುದು ಮತ್ತಷ್ಟು ಆತಂಕದ ವಿಚಾರವಾಗಿದೆ.

ಸಿರಗುಪ್ಪ ತಾಲೂಕಿನ ಗೊಸಬಾಳ ಗ್ರಾಮದ 18 ವರ್ಷದ ಮಹಿಳೆಗೆ (ರೋಗಿ ಸಂಖ್ಯೆ 930) ಕರೊನಾ ಸೋಂಕು ದೃಢಪಟ್ಟಿದೆ. ಈ ಮಹಿಳೆ ಜ್ವರ ಹಾಗೂ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಸ್ಥಳೀಯ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಳು. ಗುಣಮುಖಳಾಗದ ಹಿನ್ನೆಲೆಯಲ್ಲಿ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಳು. ಮಹಿಳೆಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಕರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆಂಧ್ರ ಮೂಲದಿಂದ ಮಹಿಳೆಗೆ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ.

ಸಿರಗುಪ್ಪ ತಾಲೂಕಿನ 14 ವರ್ಷದ ಬಾಲಕ (ರೋಗಿ ಸಂಖ್ಯೆ 113) 40 ದಿನಗಳ ಚಿಕಿತ್ಸೆ ಬಳಿಕ ಗುಣಮುಖನಾಗಿ ಮಂಗಳವಾರ ಜಿಲ್ಲಾಸ್ಪತ್ರೆಯಿಂದ ಮನೆಗೆ ಮರಳಿದ್ದ. ಮಂಗಳವಾರವೇ ಸಿರಗುಪ್ಪ ತಾಲೂಕಿನ ಮಹಿಳೆಯಲ್ಲಿ ಸೋಂಕು ಕಂಡು ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾದಂತಾಗಿದೆ. ಈ ಪೈಕಿ 12 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬಳ್ಳಾರಿ, ಹೊಸಪೇಟೆ ನಗರ, ಸಂಡೂರು ತಾಲೂಕಿನ ಕೃಷ್ಣಾನಗರ, ಕಂಪ್ಲಿ ಪಟ್ಟಣದ ತಲಾ ಒಬ್ಬ ಸೋಂಕಿತರು ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಸಿಟಿವಿ ದೃಶ್ಯ ಆಧರಿಸಿ ಕ್ವಾರಂಟೈನ್: ಸೋಂಕಿತ ಮಹಿಳೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದರಿಂದ ಚಿಕಿತ್ಸೆ ನೀಡಿರುವ ವೈದ್ಯರು ಹಾಗೂ ಸೋಂಕಿತಳ ಸಂಪರ್ಕಕ್ಕೆ ಬಂದಿದ್ದ ನರ್ಸಿಂಗ್ ಸಿಬ್ಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಆಸ್ಪತ್ರೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಮಹಿಳೆಯ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಲಾಗುತ್ತಿದೆ.

ವೈದ್ಯರು, ಸಿಬ್ಬಂದಿ ಪ್ರತಿಭಟನೆ: ರೋಗಿಗೆ ಸೋಂಕು ದೃಢಪಟ್ಟಿರುವುದರಿಂದ ವಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯಲ್ಲಿ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹೌಸ್ ಸರ್ಜನ್ಸ್, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಇತರ ಕೆಲವು ಸಿಬ್ಬಂದಿ ಬುಧವಾರ ಪ್ರತಿಭಟನೆ ನಡೆಸಿದರು. ತಮಗೆ ಅಗತ್ಯ ರಕ್ಷಣಾ ಪರಿಕರಗಳನ್ನು ನೀಡಬೇಕೆಂದು ಪಟ್ಟು ಹಿಡಿದರು. ವಿಮ್ಸ್ ನಿರ್ದೇಶಕ ಡಾ.ದೇವಾನಂದ ಹಾಗೂ ವೈದ್ಯಕೀಯ ಅಧೀಕ್ಷಕ ಡಾ.ಮರಿರಾಜ್ ವೈದ್ಯರು ಹಾಗೂ ಸಿಬ್ಬಂದಿ ಜತೆ ಚರ್ಚಿಸಿ ಸಮಾಧಾನಪಡಿಸಿದರು.

ಸಿರಗುಪ್ಪ ತಾಲೂಕಿನ ಸೋಂಕಿತ ಮಹಿಳೆ ಅಲ್ಲಿನ ಖಾಸಗಿ ವೈದ್ಯರ ಬಳಿ ಚಿಕಿತ್ಸೆ ಪಡೆದು ಎಕ್ಸರೇ ತೆಗೆದುಕೊಂಡು ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಸೋಂಕಿತ ಮಹಿಳೆಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ವಿಮ್ಸ್ ಆಸ್ಪತ್ರೆಯಲ್ಲಿ ವಿಭಾಗವಾರು ವೈದ್ಯರು ಹಾಗೂ ಸಿಬ್ಬಂದಿಗೆ ಅಗತ್ಯ ರಕ್ಷಾ ಕವಚಗಳನ್ನು ಪೂರೈಸಲಾಗುತ್ತಿದೆ.| ಡಾ.ದೇವಾನಂದ ವಿಮ್ಸ್ ನಿರ್ದೇಶಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net