

ಸಿರಗುಪ್ಪ: ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿದ್ಯಾರ್ಥಿಗಳ ಪಾಲಿಗೆ ಪ್ರಮುಖ ಘಟ್ಟವಾಗಿದ್ದು, ಉತ್ತಮ ಅಂಕಗಳಿಸಿದರೆ ಮುಂದಿನ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಆದ್ದರಿಂದ ವಿದ್ಯಾರ್ಥಿಗಳು ಶ್ರದ್ಧೆಯಿಂದ ಪಾಠ ಕೇಳಿ ತಿಳಿದುಕೊಳ್ಳಬೇಕು ಎಂದು ಮುಖ್ಯಶಿಕ್ಷಕ ಬಿ.ಎಂ.ಸವದತ್ತಿ ತಿಳಿಸಿದರು.
ಕುಡುದಹಾಳು ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಿಶೇಷ ತರಗತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಕರು ಹೇಳುವ ಪಾಠಗಳನ್ನು ಗಮನವಿಟ್ಟು ಕೇಳಬೇಕು. ನಂತರ ಅದನ್ನು ಬರಹದ ರೂಪದಲ್ಲಿ ನೋಟ್ಸ್ ಬರೆಯಬೇಕು. ವಿದ್ಯಾರ್ಥಿಗಳು ಓದುವ ಸಮಯ ನಿಗದಿ ಮಾಡಿಕೊಳ್ಳಬೇಕು. ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ಮೊಬೈಲ್ ಮತ್ತು ಟಿವಿಯಿಂದ ದೂರವಿರಬೇಕು ಎಂದರು.
ತಾಲೂಕು ಯೋಜನಾಧಿಕಾರಿ ಸುಧೀರ್ ಅಂಗಳೂರು ಮಾತನಾಡಿದರು. ಸ್ಥಳೀಯ ಒಕ್ಕೂಟದ ಅಧ್ಯಕ್ಷ ನರಸನಗೌಡ, ಮೇಲ್ವಿಚಾರಕ ಮಾರುತಿ ಇತರರಿದ್ದರು.