

ಸಿರವಾರ: ಇನ್ನೂ ಕೆಲವೇ ದಿನಗಳಲ್ಲಿ ಜಿಪಂ, ತಾಪಂ ಚುನಾವಣೆ ಘೋಷಣೆಯಾಗಲಿದ್ದು ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಎಸ್.ಭೋಸರಾಜು ಸಲಹೆ ನೀಡಿದರು. ತಾಲೂಕಿನ ಹೀರಾ ಗ್ರಾಮದ ಶ್ರೀ ಸಿದ್ದರಾಮೇಶ್ವರ ಅಯ್ಯಪ್ಪ ತಾತನವರ ಸಾಂಸ್ಕೃತಿಕ ಭವನದಲ್ಲಿ ಸಿರವಾರ ಬ್ಲಾಕ್ ಕಾಂಗ್ರೆಸ್ ಮಂಗಳವಾರ ಹಮ್ಮಿಕೊಂಡಿದ್ದ ಚುನಾವಣಾ ಪೂರ್ವ ಸಿದ್ಧತೆ ಹಾಗೂ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.
ಜಿಪಂ, ತಾಪಂ ಚುನಾವಣೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆಗೆಳನ್ನು ಜನರಿಗೆ ತಿಳಿಸಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತಹ ಯೋಜನೆಗಳನ್ನು ಮನಮುಟ್ಟುವಂತೆ ತಿಳಿಸಬೇಕು. ಈ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿದರೆ ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಸುಲಭವಾಗಲಿದೆ ಎಂದರು.
ತಳ ಮಟ್ಟದಿಂದ ಪಕ್ಷ ಬಲವರ್ಧನೆಗೆ ಎಲ್ಲರೂ ಶ್ರಮಿಸಬೇಕು. ಪ್ರತಿ ಬೂತ್ ಮಟ್ಟದಲ್ಲಿ ಸಮಿತಿ ರಚಿಸಿ ಕನಿಷ್ಠ 20 ಜನರಂತೆ ಸಕ್ರಿಯ ಸದಸ್ಯರನ್ನು ನೇಮಿಸಬೇಕು. ಅವರ ಮೂಲಕ ಜನರೊಡನೆ ನೇರ ಸಂಪರ್ಕ ಸಾಧಿಸಬೇಕು. ಜನಬಲವಿದ್ದರೆ ಮಾತ್ರ ಚುನಾವಣೆ ಗೆಲ್ಲಲು ಸಾಧ್ಯ. ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದರು.