

ಹೊಳೆನರಸೀಪುರ: ಶಾಸಕ ಎಚ್.ಡಿ.ರೇವಣ್ಣ ಅವರ ಮನೆಗೆ ಮಂಗಳವಾರ ಎಸ್‌ಐಟಿ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಶಾಸಕ ಎಚ್.ಡಿ.ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ದೂರನ್ನು ಮಹಿಳೆಯೊಬ್ಬರು ಏಪ್ರಿಲ್28 ರಂದು ನಗರ ಪೊಲೀಸ್ ಠಾಣೆಯಲ್ಲಿ ನೀಡಿದ್ದರು. ಎಸ್‌ಐಟಿ ಅಧಿಕಾರಿಗಳು ಮೇ 4ರಂದು ಶಾಸಕ ಎಚ್.ಡಿ.ರೇವಣ್ಣ ಅವರ ಮನೆಗೆ ಆಗಮಿಸಿ ಸ್ಥಳ ಪರಿಶೀಲನೆ ಹಾಗೂ ಮಹಜರು ನಡೆಸಿ ಸಂತ್ರಸ್ತೆಯ ಹೇಳಿಕೆಯನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು.
ಇದೀಗ ಎರಡನೇ ಬಾರಿ ಮಂಗಳವಾರ ಎಸಿಪಿ ಸತ್ಯನಾರಾಯಣ ನೇತೃತ್ವದಲ್ಲಿ ಎಸ್‌ಐಟಿ ಅಧಿಕಾರಿಗಳು ಎರಡು ವಾಹನಗಳಲ್ಲಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಸಿಪಿಯು, ಮಾನಿಟರ್, ಪ್ರಿಂಟರ್ ತಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಗನ್ನಿಕಡದ ತೋಟದ ಮನೆಗೂ ಎಸ್‌ಐಟಿ ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.