

ಪಾಂಡವಪುರ: ಮಹಿಳಾ ಸ್ವ ಸಹಾಯ ಸಂಘಗಳ ಆರ್ಥಿಕ ಸ್ವಾವಲಂಬನೆ ಹಾಗೂ ಮಹಿಳೆಯರ ಆರ್ಥಿಕ ಬಲವರ್ಧನೆಗೆ ಅಕ್ಕ ಕೆಫೆ ಸಹಕಾರಿಯಾಗಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಆರಂಭಿಸಲು ಉದ್ದೇಶಿಸಿರುವ ಅಕ್ಕ ಕೆಫೆಗೆ ಸಂಬಂಧಿಸಿದಂತೆ ಮಂಗಳವಾರ ಸ್ಥಳ ಪರಶೀಲನೆ ನಡೆಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಅಕ್ಕ ಕೆಫೆ ಯೋಜನೆಯಡಿ ಪಾಂಡವಪುರ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಕೆಫೆ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಮೂರು ಕೆಫೆ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಹೆಚ್ಚುವರಿಯಾಗಿ ಇನ್ನೂ ಐದು ಕೆಫೆಗಳನ್ನು ಮಂಜೂರು ಮಾಡಿಕೊಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರು ಮತ್ತು ರೈತರಿಗೆ ಅಕ್ಕ ಕೆಫೆಯಿಂದ ಅನುಕೂಲವಾಗಲಿದೆ. ಕೆಫೆಗಳಲ್ಲಿ ಶುಚಿ, ರುಚಿಯಾದ ಹಾಗೂ ಉತ್ತಮ ಗುಣಮಟ್ಟದ ಆಹಾರ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಕೆಫೆಗಳು ಕಾರ್ಯ ನಿರ್ವಹಿಸಲಿವೆ ಎಂದು ಮಾಹಿತಿ ನೀಡಿದರು.
ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮೀ, ಕೆಆರ್‌ಐಡಿಎಲ್ ಕಾರ್ಯಪಾಲಕ ಇಂಜಿನಿಯರ್ ಸೋಮಶೇಖರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಇತರರಿದ್ದರು.