

ಹನೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದೊರಕುವ ಸವಲತ್ತುಗಳ ಬಗ್ಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರವೀಂದ್ರ ತಿಳಿಸಿದರು.
ಪಟ್ಟಣದ ಹಳೇ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ಸಮುದಾಯ ಸಂಪನ್ಮೂಲ ಮಹಿಳೆಯರಿಗೆ 6 ದಿನಗಳ ಕಾಲ ಆಯೋಜಿಸಿರುವ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಸಮಾಜದಲ್ಲಿ ಈ ಹಿಂದೆ ಮಹಿಳೆಯರು ಅಡುಗೆ ಕೋಣೆಗೆ ಮಾತ್ರ ಸೀಮಿತ ಎಂಬ ಅಭಿಪ್ರಾಯವಿತ್ತು. ಆದರೀಗ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವುದರ ಜತೆಗೆ ಉನ್ನತ ಹುದ್ದೆ ಅಲಂಕರಿಸಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಸರ್ಕಾರ ಮಹಿಳೆಯರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದು ಹಲವು ಸವಲತ್ತುಗಳನ್ನು ಒದಗಿಸುತ್ತಿದೆ. ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಕೌಶಲ ತರಬೇತಿ ನೀಡುವುದರ ಮೂಲಕ ಮಹಿಳೆಯರಿಗೆ ಉದ್ಯೋಗವನ್ನು ಸೃಷ್ಟಿಸುತ್ತಿದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿನ ಮಹಿಳೆಯರಿಗೆ ಈ ಬಗ್ಗೆ ಮಾಹಿತಿ ಕೊರತೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಹಳ್ಳಿಗಳಲ್ಲಿ ಸ್ವ ಸಹಾಯ ಸಂಘದ ಮೂಲಕ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಗ್ರಾಮಗಳಲ್ಲಿ ನಡೆಯುವ ಸಭೆ, ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಗ್ರಾಪಂ ವತಿಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ಕೊಡಬೇಕು. ಇದರಿಂದ ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಎನ್‌ಆರ್‌ಎಲ್‌ಎಂ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಕಿಶೋರ್, ಸಂಪನ್ಮೂಲ ವ್ಯಕ್ತಿ ಅಶ್ವಿನಿ, ತಾಲೂಕು ವಲಯ ಮೇಲ್ವಿಚಾರಕಿ ಕುಮಾರಿ ಇದ್ದರು.