ಸಣ್ಣ ಬೆಳೆಗಾರರಿಗೂ ಸಿಗಬೇಕು ಸರ್ಕಾರಿ ಸೌಲಭ್ಯ

17 sri 01
Published on

ಶ್ರೀಮಂಗಲ: ಪ್ರಾಕೃತಿಕ ವಿಕೋಪ ಮತ್ತು ವನ್ಯಜೀವಿಗಳ ಹಾವಳಿಯಿಂದ ಕೊಡಗು ಜಿಲ್ಲೆಯ ಬೆಳೆಗಾರರು ಎರಡು ವರ್ಷಗಳಿಂದ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಸಣ್ಣ ಬೆಳೆಗಾರರಿಗೆ ಬಿಪಿಎಲ್ ಕಾರ್ಡ್ ನೀಡುವ ಮೂಲಕ ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಬೇಕೆಂದು ಕೊಡಗು ಜಿಲ್ಲಾ ಬೆಳೆಗಾರರ ಒಕ್ಕೂಟ ಆಗ್ರಹಿಸಿದೆ.

ಈ ಸಂಬಂಧ ಗೋಣಿಕೊಪ್ಪ ಮಹಿಳಾ ಸಮಾಜದಲ್ಲಿ ಒಕ್ಕೂಟದ ಅಧ್ಯಕ್ಷ ಕೈಬಿಲೀರ ಹರೀಶ್ ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ನಡೆಯಿತು.

ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ಬೆಳೆ ನಷ್ಟ ಅನುಭವಿಸುವುದರ ಜತೆಗೆ ಬೆಲೆ ಕುಸಿತ ಹಾಗೂ ಉತ್ಪಾದನಾ ವೆಚ್ಚ ಹೆಚ್ಚಳ ಸಮಸ್ಯೆಯಿಂದ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಅಲ್ಲದೆ ಈಗಾಗಲೇ ಜಿಲ್ಲೆಯ ಸರ್ವ ಬೆಳೆಗಾರರ ಒಕ್ಕೂಟದಿಂದ ನೀಡಲಾದ ಮನವಿಗೆ ಸ್ಪಂದಿಸಿರುವ ಮಡಿಕೇರಿ ಶಾಸಕರು, ಜಿಲ್ಲೆಗೆ ಆಗಮಿಸಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ಅವರ ಗಮನಕ್ಕೆ ತಂದಿದ್ದಾರೆ. ಪರಿಣಾಮ ನಾಲ್ಕು ಚಕ್ರದ ವಾಹನ ಇರುವವರಿಗೂ ಬಿಪಿಎಲ್ ಕಾರ್ಡ್ ನೀಡುವ ಇಂಗಿತವನ್ನು ಸಚಿವರು ವ್ಯಕ್ತಪಡಿಸಿದ್ದಾರೆ. ಇದನ್ನು ಬೆಳೆಗಾರರ ಒಕ್ಕೂಟ ಸ್ವಾಗತಿಸಲಿದೆ ಎಂದು ಹರೀಶ್ ಅಪ್ಪಯ್ಯ ಹೇಳಿದರು.

ಜಿಲ್ಲೆಯಲ್ಲಿ ಕಾಫಿ ಮತ್ತು ಇತರ ಬೆಳೆಗಾರರ ಆದಾಯ ಕುಸಿದಿದ್ದು, ಆದಾಯ ಪ್ರಮಾಣ ಪತ್ರ ನೀಡುವಾಗ ಕಂದಾಯ ಇಲಾಖೆ ಇದನ್ನು ಗಮನಕ್ಕೆ ತೆಗೆದುಕೊಳ್ಳಬೇಕು. ತಪ್ಪು ಕಲ್ಪನೆಯಿಂದ ಹೆಚ್ಚು ಆದಾಯ ಇದೆ ಎಂದು ದೃಢೀಕರಣ ಪತ್ರ ನೀಡಲಾಗುತ್ತಿದ್ದು, ಇದರಿಂದ ಸಣ್ಣ ಬೆಳೆಗಾರರು ಬಿಪಿಎಲ್ ಪಟ್ಟಿಗೆ ಸೇರಲು ಸಾಧ್ಯವಾಗುವುದಿಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿಬಂತು.

ಜಿಲ್ಲೆಯ ಬೆಳೆಗಾರರ ಎಲ್ಲ ಸಾಲವನ್ನು ಮನ್ನಾ ಮಾಡಬೇಕು. ಕೃಷಿ ಸಾಲ ಪಡೆಯಲು ಬ್ಯಾಂಕ್‌ನಲ್ಲಿ ಸಿಬಿಲ್ ಅರ್ಹತೆಯನ್ನು ತೆಗೆಯಬೇಕು. ಕೋವಿಡ್-19ನಿಂದಾಗಿ ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರಿಗೂ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸಬಹುದೆಂಬ ರಾಜ್ಯ ಸರ್ಕಾರದ ತೀರ್ಮಾನದ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಡಾ. ಸಣ್ಣುವಂಡ ಕಾವೇರಪ್ಪ, ಪ್ರಧಾನ ಕಾರ್ಯದರ್ಶಿ ಅಣ್ಣೀರ ಹರೀಶ್‌ಮಾದಪ್ಪ, ಕಾರ್ಯದರ್ಶಿ ಬೊಳ್ಳೇರ ರಾಜಸುಬ್ಬಯ್ಯ, ಖಜಾಂಚಿ ಮಾಣೀರ ವಿಜಯನಂಜಪ್ಪ, ತಾಂತ್ರಿಕ ಸಲಹೆಗಾರ ಚೆಪ್ಪುಡೀರ ಶರಿಸುಬ್ಬಯ್ಯ, ಆಡಳಿತ ಮಂಡಳಿಯ ಚೋಡುಮಾಡ ಶರಿನ್‌ಸುಬ್ಬಯ್ಯ, ಮಾಪಂಗಡ ಯಮುನಾ ಚಂಗಪ್ಪ, ಆಶಾ ಜೇಮ್ಸ್, ತೀತಿರ ಊರ್ಮಿಳಾ ಸೋಮಯ್ಯ, ಕರ್ತಮಾಡ ನಂದ, ಕಾಳಿಮಾಡ ರಶಿಕ, ಕಾಳಿಮಾಡ ತಮ್ಮ ಮುತ್ತಣ್ಣ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net