ಮೈಸೂರು: ಇತ್ತೀಚಿನ ದಿನಗಳಲ್ಲಿ ಮಣ್ಣು ಕಲುಷಿತಗೊಳ್ಳುತ್ತಿದ್ದು, ಮಣ್ಣು ರಕ್ಷಣೆ ಮಾಡಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ಅಧ್ಯಕ್ಷ ಸಿ.ಚಂದನ್‌ಗೌಡ ಹೇಳಿದರು.
ಉತ್ತಿಷ್ಠ ಭಾರತ ಪ್ರತಿಷ್ಠಾನದಿಂದ ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಣ್ಣು ಉಳಿಸಿ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಸಾಯನಿಕಗಳ ಅಧಿಕ ಬಳಕೆಯಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಇದು ಹೀಗೆಯೇ ಮುಂದುವರಿದರೆ ಭವಿಷ್ಯದಲ್ಲಿ ಭೂಮಿ ಬರಡಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಮಣ್ಣಿನ ಸಂರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು.
ಮಣ್ಣು ರಕ್ಷಣೆಯಿಂದ ಪರಿಸರ ಸಂರಕ್ಷಣೆ ಸಾಧ್ಯ. ನಮ್ಮಲ್ಲಿನ ಶೇ.62ರಷ್ಟು ಮಣ್ಣು ಗುಣಮಟ್ಟ ಕಳೆದುಕೊಂಡಿದ್ದು, ಸರ್ಕಾರ ಮಣ್ಣು ಸಂರಕ್ಷಣೆ ಕಾಯ್ದೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಕಸಾಪ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಸಮಾಜ ಸೇವಕ ಕೆ.ರಘುರಾಮ್ ವಾಜಪೇಯಿ, ದತ್ತಕ್ರಿಯಾ ಯೋಗ ಶಿಕ್ಷಕ ಜಿ.ಮೋಹನ್, ಪ್ರತಿಷ್ಠಾನದ ಕಾರ್ಯದರ್ಶಿ ಎಂ.ವಿ.ನಾಗೇಂದ್ರ ಬಾಬು, ಕಾರ್ಯಕಾರಿ ಸಮಿತಿ ಸದಸ್ಯರಾದ ಜಯಸಿಂಹ, ಶ್ರೀಧರ್, ಎನ್.ಅನಂತ್ ಇತರರು ಇದ್ದರು.