ಸಾರ್ವಜನಿಕರ ಸಮಸ್ಯೆ ಸಕಾಲದಲ್ಲಿ ಇತ್ಯರ್ಥಪಡಿಸಿ: ಕೆ.ಸಿ.ಪ್ರಕಾಶ್

duru arji svikara
Published on

ಮಡಿಕೇರಿ: ಸಾರ್ವಜನಿಕರ ಸಮಸ್ಯೆಗಳನ್ನು ಸಕಾಲದಲ್ಲಿ ಇತ್ಯರ್ಥಪಡಿಸಲು ಅಧಿಕಾರಿಗಳು ಶ್ರಮಿಸುವಂತೆ ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕ ಕೆ.ಸಿ.ಪ್ರಕಾಶ್ ಸೂಚಿಸಿದರು.

ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬುಧವಾರ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ಸ್ವೀಕರಿಸಿ ಮಾತನಾಡಿ, ಎಲ್ಲಾ ಕಚೇರಿಗಳಲ್ಲಿ ಲೋಕಾಯುಕ್ತ ಕಾಯ್ದೆಯ ಮಾಹಿತಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಉತ್ತರಾದಾಯಿತ್ವ ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.

ಕಂದಾಯ, ಪಂಚಾಯತ್ ರಾಜ್, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಕೆಲಸಕ್ಕಾಗಿ ಭೇಟಿ ನೀಡುತ್ತಾರೆ. ಆದ್ದರಿಂದ ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸುವುದು ಅಧಿಕಾರಿ ಮತ್ತು ಸಿಬ್ಬಂದಿಗಳ ಜವಾಬ್ದಾರಿಯಾಗಿದೆ. ಸಾರ್ವಜನಿಕವಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದಾಗ ಹಲವು ಸಮಸ್ಯೆಗಳನ್ನು ಇತ್ಯರ್ಥಪಡಿಸಬಹುದು ಎಂದು ಹೇಳಿದರು.

ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಗುಣಮಟ್ಟದ ಆಹಾರ ವಿತರಿಸಬೇಕು. ಸುಭದ್ರತೆಯತ್ತ ಗಮನಹರಿಸಬೇಕು. ರಿಜಿಸ್ಟ್ರಾರ್ ನಿರ್ವಹಿಸಬೇಕು. ಕುಡಿಯಲು ಶುದ್ಧ ನೀರು ಮತ್ತು ಸ್ನಾನಕ್ಕೆ ಬಿಸಿನೀರು ವ್ಯವಸ್ಥೆ ಮಾಡಬೇಕು ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ ಬದಿ ಸ್ವಚ್ಛತೆಗೆ ಒತ್ತು ನೀಡಬೇಕು. ಸಾರ್ವಜನಿಕರ ಕುಂದುಕೊರತೆ ಆಲಿಸಬೇಕು. ಪ್ಲಾಸ್ಟಿಕ್ ಬಿಸಾಕದಂತೆ ಅರಿವು ಮೂಡಿಸಬೇಕು. ಬೀದಿದೀಪ ಸಮರ್ಪಕ ನಿರ್ವಹಣೆ ಮಾಡಬೇಕು. ರಸ್ತೆ ಗುಂಡಿ ಮುಚ್ಚಬೇಕು. ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನೆ, ಕಾರ್ಮಿಕ ಇಲಾಖೆ, ಲೋಕೋಪಯೋಗಿ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಹೀಗೆ ವಿವಿಧ ಇಲಾಖೆಯ ಕಾರ್ಯಕ್ರಮ ಸಂಬಂಧಿಸಿದಂತೆ ಮಾಹಿತಿ ಪಡೆದರು. ಬುಧವಾರ ನಡೆದ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ ೪ ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ಕಂದಾಯ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾದವು.

ತಹಶೀಲ್ದಾರರಾದ ಪ್ರವೀಣ್ ಕುಮಾರ್ ಅವರು ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳನ್ನು ಆದಷ್ಟು ಶೀಷ್ಟ್ರ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net