ವಿದ್ಯುತ್ ಸಮಸ್ಯೆ ನಿಗದಿತ ಅವಧಿಯೊಳಗೆ ಬಗೆಹರಿಸಿ: ಸಚಿವ ಕೆ.ಜೆ.ಜಾರ್ಜ್

11
Published on

ಮೈಸೂರು: ರೈತರು, ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸಿ ಸಮಸ್ಯೆಗಳನ್ನು ನಿಗದಿತ ಅವಧಿಯೊಳಗೆ ಬಗೆಹರಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೆಸ್ಕ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು.

ಕೆ.ಆರ್.ನಗರ ಶಾಸಕ ಡಿ.ರವಿಶಂಕರ್ ಅವರು ಮಾತನಾಡಿ, ಸೆಸ್ಕ್ ಸಿಬ್ಬಂದಿ ಹಾಗೂ ಲೈನ್‌ಮನ್‌ಗಳು ರೈತರೊಂದಿಗೆ ಸೌಜನ್ಯದಿಂದ ವರ್ತಿಸದೆ, ಅವರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ವಿದ್ಯುತ್ ಸಮಸ್ಯೆಗಳ ಕುರಿತು ರೈತರು, ಗ್ರಾಹಕರು ಮಾಹಿತಿ ನೀಡಿದಾಗ ಇಂಧನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಲೈನ್‌ಮನ್‌ಗಳು ಸೌಜನ್ಯಯುತವಾಗಿ ವರ್ತಿಸಿ ವಿದ್ಯುತ್ ಸಮಸ್ಯೆಗಳನ್ನು ನಿಗದಿತ ಅವಧಿಯೊಳಗೆ ಬಗೆಹರಿಸಬೇಕು. ಯಾವುದೇ ಸಿಬ್ಬಂದಿ ನಿರ್ಲಕ್ಷೃ ತಾಳಿದರೆ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕೆ.ಆರ್. ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ಕುಡಿಯುವ ನೀರಿನ ಪೂರೈಕೆಗೆ ಅಡಚಣೆಯಾಗುತ್ತಿರುವ ವಿದ್ಯುತ್ ಪೂರೈಕೆಯ ಬಗ್ಗೆ ಹೆಚ್ಚು ಗಮನಹರಿಸಬೇಕು. ಅಲ್ಲದೆ, ನಗರದಲ್ಲಿ ಭೂಗತ ವಿದ್ಯುತ್ ಕೇಬಲ್ ಕಾಮಗಾರಿ ಏನಾಗಿದೆ ಎನ್ನುವ ಮಾಹಿತಿಯನ್ನು ಜನಪ್ರತಿನಿಧಿಗಳಿಗೆ ನೀಡಬೇಕು ಎಂದು ಹೇಳಿದರು.

ಮೈಸೂರು ನಗರ ಮಾತ್ರವಲ್ಲದೆ, ಜಿಲ್ಲಾದ್ಯಂತ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪಂಪ್‌ಹೌಸ್‌ಗಳಿಗೂ ವಿದ್ಯುತ್ ಸಮಸ್ಯೆಯಾಗದಂತೆ ಗಮನಹರಿಸಲಾಗುವುದು. ಸೆಸ್ಕ್ ಅಧಿಕಾರಿಗಳು ಜನಪ್ರತಿನಿಧಿಗಳನ್ನು ಭೇಟಿಯಾಗಿ ಅವರ ಸಲಹೆ ಪಡೆದು ಕೆಲಸ ಮಾಡಬೇಕು ಎಂದು ತಿಳಿಸಿದರು.

ಶಾಸಕ ತನ್ವೀರ್ ಸೇಠ್ ಮಾತನಾಡಿ, ಸೆಸ್ಕ್ ಸಂಪನ್ಮೂಲ ಸಂಗ್ರಹಣೆಯ ಕಡೆ ಗಮನ ಹರಿಸಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಬೋರ್‌ವೆಲ್ ಕೊರೆದ ತಕ್ಷಣ ಅಲ್ಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಕುಡಿಯುವ ನೀರಿನ ಯೋಜನೆಗಳ ವಿದ್ಯುತ್ ಸಂಪರ್ಕಕ್ಕೆ ಪಂಪ್‌ಹೌಸ್‌ಗಳಲ್ಲಿ ಓವರ್ ಲೋಡ್ ಆಗಿ ಟ್ರಿಪ್ ಆಗುತ್ತಿವೆ. ಇವುಗಳನ್ನು ಸರಿಪಡಿಸಬೇಕು ಎಂದು ಸಲಹೆ ನೀಡಿದರು.

ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಮಾತನಾಡಿ, ಅರಣ್ಯದಂಚಿನ ಪ್ರದೇಶಗಳಲ್ಲಿ ಹಗಲಿನ ವೇಳೆ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ವನ್ಯಜೀವಿ ಸಂಘರ್ಷ ಇರುವೆಡೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲರಾಜ್ ಮಾತನಾಡಿ, ಸೆಸ್ಕ್ ವ್ಯಾಪ್ತಿಯಲ್ಲಿ ಇಂಧನ ಇಲಾಖೆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಮಳೆಯಿಂದಾಗಿ ಹಲವು ಕಡೆಗಳಲ್ಲಿ ಸಾಕಷ್ಟು ಹಾನಿಯಾಗಿತ್ತು. ಅಪಾಯಕಾರಿ ಸ್ಥಳಗಳನ್ನು ಗುರುತಿಸಿ, ತುರ್ತಾಗಿ ಕಾಮಗಾರಿ ಕೈಗೊಳ್ಳಲಾಗಿದೆ. ಮೈಸೂರು ನಗರದಲ್ಲಿ ಭೂಗತ ಕೇಬಲ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ಎರಡು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಶಾಸಕರಾದ ಜಿ.ಟಿ.ದೇವೇಗೌಡ, ಕೆ. ಹರೀಶ್‌ಗೌಡ, ವಿಧಾನಪರಿಷತ್ ಸದಸ್ಯರಾದ ಕೆ. ವಿವೇಕಾನಂದ, ಡಾ.ಡಿ.ತಿಮ್ಮಯ್ಯ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್‌ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್, ಜಿಲ್ಲಾ ಅಧ್ಯಕ್ಷ ಅರುಣ್ ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net