

ವಿಜಯವಾಣಿ ಸುದ್ದಿಜಾಲ ಸೋಮವಾರಪೇಟೆ
ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಈ ಬಾರಿ ಗೆದ್ದೆ ಗೆಲ್ಲುತ್ತದೆ ಎಂದು ಸಂಭವನೀಯ ಅಭ್ಯರ್ಥಿ ನಾಪಂಡ ಎಂ. ಮುತ್ತಪ್ಪ ಹೇಳಿದರು.
ಸೋಮವಾರಪೇಟೆಯಲ್ಲಿ ಸೋಮವಾರ ತಾಲೂಕು ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಬಲ ಸ್ಪರ್ಧೆಯೊಂದಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸಲಾಗುವುದೆಂದು ವಿಶ್ವಾಸ ವ್ಯಕ್ತ ಪಡಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಜ.೨೪ ರಂದು ಸೋಮವಾರಪೇಟೆಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ವಿವಿಧ ಪಕ್ಷ ತೊರೆದು ಯುವಜನ ಜೆಡಿಎಸ್ ಸೇರ್ಪಡೆಗೊಳ್ಳುತ್ತಿದ್ದಾರೆ. ಅಂದಿನ ಸಮಾವೇಶದಲ್ಲಿ ರಾಜ್ಯಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆಂದರು.
ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳುತ್ತಿದ್ದಾರೆ. ಕ್ಷೇತ್ರ ವ್ಯಾಪ್ತಿಯಲ್ಲಿರುವ ಕಾರ್ಯಕರ್ತರಿಗೆ ನೈತಿಕಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ. ಸೋಮವಾರಪೇಟೆ ಸಮಾವೇಶದ ಬಳಿಕ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತಷ್ಟು ಒತ್ತು ನೀಡಲಾಗುವುದೆಂದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳು, ಮಡಿಕೇರಿ ನಗರಸಭೆ, ಕುಶಾಲನಗರ ತಾಲೂಕು ವ್ಯಾಪ್ತಿಯ ಕುಶಾಲನಗರ ಪಟ್ಟಣ ಪಂಚಾಯಿತಿ, ೧೮ ಗ್ರಾಮ ಪಂಚಾಯಿತಿಗಳು, ಶನಿವಾರಸಂತೆ, ಕೊಡ್ಲಿಪೇಟೆ, ಆಲೂರು- ಸಿದ್ದಾಪುರ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ ಮಾಡಲಾಗಿದೆ ಎಂದರು.
ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಹಣಕೋಡು ಸುರೇಶ್ ಕಚೇರಿ ಉದ್ಘಾಟಿಸಿದರು. ಜೆಡಿಎಸ್ ಪ್ರಮುಖರಾದ ಎಂ.ಬಿ. ರುಬೀನಾ, ಹೊಸಬೀಡು ಹೂವಯ್ಯ ಮತ್ತಿತರರು ಇದ್ದರು.