

ಸೋಮವಾರಪೇಟೆ: ಸಮಾಜದ ಶ್ರೇಷ್ಠ ವ್ಯಕ್ತಿಗಳ ಸಾಲಿನಲ್ಲಿ ಶಿಕ್ಷಕರಿದ್ದು, ಸರ್ವರಿಗೂ ಸಮಾನ ಶಿಕ್ಷಣ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಸೀನಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಜಿಲ್ಲಾ ಪಂಚಾಯಿತಿ, ಸೋಮವಾರಪೇಟೆ ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದರು. ಹೆಚ್ಚಿನ ಶಿಕ್ಷಕರು ಸ್ವಾರ್ಥಿಗಳಾಗದೆ ತಾವು ಕಲಿತ ವಿದ್ಯೆಯನ್ನು ಪರರಿಗೆ ಹಂಚುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತವಾಗದೆ, ಎಲ್ಲರಿಗೂ ಶಿಕ್ಷಣ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ಚಿಕ್ಕಅಳುವಾರದಲ್ಲಿರುವ ಕೊಡಗು ವಿಶ್ವವಿದ್ಯಾಲಯವನ್ನು ಮಾದರಿ ವಿವಿ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ವಿಶ್ವವಿದ್ಯಾನಿಲಯ ಮುಚ್ಚುತ್ತಾರೆ ಎಂಬ ಅಪಪ್ರಚಾರ ನಡೆಯುತ್ತಿದೆ. ಆದರೆ ಈ ವರ್ಷ ಹೆಚ್ಚಿನ ಪ್ರವೇಶಾತಿಯಾಗುತ್ತಿದೆ. ಜಿಲ್ಲೆಯ 23 ಕಾಲೇಜುಗಳು ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುತ್ತವೆ. 17 ವಿವಿಧ ಕೋರ್ಸ್‌ಗಳಿದ್ದು, ಮುಂದೆ ನೂತನ ಕೋರ್ಸ್‌ಗಳನ್ನು ಆರಂಭಿಸಲಾಗುವುದು. ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವ ಕನಸು ನನಸು ಮಾಡುವುದು ನಮ್ಮ ಗುರಿ ಎಂದರು.
ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕೆ.ಕೆ.ಮಂಜುನಾಥ್‌ಕುಮಾರ್ ಮಾತನಾಡಿ, ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡುತ್ತಿರುವ ಶಿಕ್ಷಕರು ಸಾಕಷ್ಟು ಸಮಸ್ಯೆಗಳ ನಡುವೆ ಜೀವನ ನಡೆಸುತ್ತಿದ್ದಾರೆ. 2004ರಲ್ಲಿ ಜಾರಿಗೆ ತಂದ ಎನ್‌ಪಿಎಸ್ ಯೋಜನೆಯಿಂದಾಗಿ ಸಂಧ್ಯಾ ಕಾಲದಲ್ಲಿ ಶಿಕ್ಷಕರ ಕುಟುಂಬ ಸಂಕಷ್ಟದ ಜೀವನ ನಡೆಸಬೇಕಾಗಿದೆ. ಜನಪ್ರತಿನಿಧಿಗಳಿಗೆ ಯಾವುದೇ ಸಾಮಾನ್ಯ ಕಾನೂನಿನ ಮತ್ತು ಯೋಜನೆಗಳ ಅರಿವು ಇಲ್ಲದಿರುವುದು ಸಾಕಷ್ಟು ಸಮಸ್ಯೆ ಜೀವಂತವಾಗಿ ಉಳಿಯುವಂತಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು, ಜಿಲ್ಲಾ ಪ್ರಶಸ್ತಿಗೆ ಭಾಜನರಾದ ಶಿಕ್ಷಕರು ಹಾಗೂ ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಿಕ್ಷಕರಿಗೆ ಆಯೋಜಿಸಿದ್ದ ವಿವಿಧ ಕ್ರೀಡಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ತಹಸೀಲ್ದಾರ್ ಎಸ್.ಎನ್. ನರಗುಂದ ಕಾರ್ಯಕ್ರಮ ಉದ್ಘಾಟಿಸಿದರು. ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿ.ಎಸ್. ಗೀತಾ ಅಧ್ಯಕ್ಷತೆ ವಹಿಸಿದ್ದರು. ಕೂಡಿಗೆ ಡಯಟ್ ಉಪನಿರ್ದೇಶಕ ಎಂ. ಚಂದ್ರಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ.ಸೋಮಶೇಖರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರ್, ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸದಾಶಿವಯ್ಯ ಎಸ್.ಪಲ್ಲೆದ್, ನಿವೃತ್ತ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎ.ಪಿ.ಸೋಮಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ತಾಲೂಕು ಘಟಕದ ಅಧ್ಯಕ್ಷ ಬಸವರಾಜು ಮತ್ತಿತರರು ಇದ್ದರು.