ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ ಮರುತನಿಖೆ ಆಗ್ರಹಿಸಿ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಬಳಿ ನಿಯೋಗ ಕೊಂಡೊಯ್ಯಲು ಬಿಜೆಪಿ ತೀರ್ಮಾನ

IMG-20230812-WA0108
Published on

ವಿಜಯವಾಣಿ ಸುದ್ದಿಜಾಲ ಮಂಗಳೂರು
ಬೆಳ್ತಂಗಡಿ ತಾಲೂಕಿನ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸಬೇಕು ಹಾಗೂ ಆಕೆಯ ಕುಟುಂಬಕ್ಕೆ ನ್ಯಾಯ ದೊರೆಯಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲ ಶಾಸಕರನ್ನು ಒಳಗೊಂಡ ನಿಯೋಗ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರನ್ನು ಬೇಟಿಯಾಗಿ ಮನವಿ ಸಲ್ಲಿಸಲಿದೆ.
ನಗರದ ಹೊಟೇಲ್‌ನಲ್ಲಿ ಶನಿವಾರ ಬೆಳಗ್ಗೆ ಉಭಯ ಜಿಲ್ಲೆಗಳ ಶಾಸಕರು ಹಾಗೂ ಪಕ್ಷದ ಮುಖಂಡರ ಸಭೆ ನಡೆಸಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು ಸುದ್ದಿಗೋಷ್ಠಿಯಲ್ಲಿ ಈ ತೀರ್ಮಾನವನ್ನು ಪ್ರಕಟಿಸಿದರು.
ಪ್ರಸ್ತಾವಿತ ಬೇಡಿಕೆ ಮುಂದಿಟ್ಟು ಆಗೊಸ್ಟ್ 27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ಉಭಯ ಜಿಲ್ಲೆಯ ಶಾಸಕರು ಪ್ರತಿಭಟನೆ ನಡೆಸಲಿದ್ದಾರೆ. ಪ್ರಕರಣದ ಆರೋಪಿಯನ್ನು ಸಿಬಿಐ ವಿಶೇಷ ನ್ಯಾಯಾಲಾಯ ಖುಲಾಸೆಗೊಳಿಸಿದ ಹಿನ್ನೆಲೆಯಲ್ಲಿ ನೈಜ ಆರೊಪಿಯನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಸೌಜನ್ಯಾ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎನ್ನುವುದು ತಮ್ಮ ಪಕ್ಷದ ಏಕೈಕ ಬೇಡಿಕೆಯಾಗಿದೆ ಎಂದು ಅವರು ಹೇಳಿದರು.
ಶಾಸಕರಾದ ಹರೀಶ್ ಕುಮಾರ್ ಪೂಂಜಾ, ಡಿ.ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ, ಡಾ.ವೈ.ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಉಮಾನಾಥ ಕೋಟ್ಯಾನ್, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ ಗಂಟಿಹೊಳೆ, ಪ್ರತಾಪ್‌ಸಿಂಹ ನಾಯಕ್, ಬಿಜೆಪಿ ದಕ ಜಿಲ್ಲಾ ಅಧ್ಯಕ್ಷ ಸುದರ್ಶನ ಮೂಡುಬಿದರೆ, ಮುಖಂಡರಾದ ಕ್ಯಾ.ಗಣೇಶ್ ಕಾರ್ಣಿಕ್, ಉದಯ ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net