ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ನಿಂಗರಾಜ್ ಗೌಡ ಬಿಜೆಪಿ ಅಭ್ಯರ್ಥಿ

Ningaraj gowda
Published on

ಮೈಸೂರು: ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳನ್ನೊಳಗೊಂಡ ಮೈಸೂರು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಕಣ ಅಂತಿಮಗೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮೈಸೂರು ವಿಶ್ವ ವಿದ್ಯಾಲಯ ಸಿಂಡಿಕೇಟ್ ಮಾಜಿ ಸದಸ್ಯ ಇ.ಸಿ. ನಿಂಗರಾಜ್ ಗೌಡ ಹೆಸರನ್ನು ಶನಿವಾರ ಅಧಿಕೃತವಾಗಿ ಘೋಷಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಕಣಕ್ಕಿಳಿಯುವುದು ನಿಶ್ಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಈಗಾಗಲೇ ಮರಿತಿಬ್ಬೇಗೌಡ ಚುನಾವಣಾ ಪ್ರಚಾರ ಪ್ರಾರಂಭಿಸಿದ್ದಾರೆ.

ಕಳೆದ ಬಾರಿಯ ಚುನಾವಣೆಯಲ್ಲಿ ಮರಿತಿಬ್ಬೇಗೌಡ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡು ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಕಳೆದ ವರ್ಷ ನಡೆದ ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರ ಗೆಲುವಿಗೆ ಮರಿತಿಬ್ಬೇಗೌಡ ಶ್ರಮಿಸಿದ್ದರು. ಆ ಸಂದರ್ಭದಲ್ಲಿಯೇ ಕಾಂಗ್ರೆಸ್ ಹೈಕಮಾಂಡ್ ಮರಿತಿಬ್ಬೇಗೌಡರಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್ ಖಾತ್ರಿ ಮಾಡಿತ್ತು.

ಅಂತಿಮಗೊಂಡ ಮೈತ್ರಿ:
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿತು. ಈ ಮೈತ್ರಿ ಮುಂದಿನ ಎಲ್ಲ ಚುನಾವಣೆಗಳಲ್ಲೂ ಮುಂದುವರೆಯಲಿದೆ ಎಂದು ಉಭಯ ಪಕ್ಷದ ನಾಯಕರು ತಿಳಿಸಿದ್ದರು. ಅಂತೆಯೇ ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಏರ್ಪಟ್ಟಿದೆ.

ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಬಿಜೆಪಿ-ಜೆಡಿಎಸ್ ನಡುವಿನ ಮೈತ್ರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮುಂದುವರೆಯುವುದೇ ಅಥವಾ ಇಲ್ಲವೇ ಎಂಬ ಅನುಮಾನ ಎಲ್ಲರಲ್ಲೂ ಕಾಡುತಿತ್ತು. ಆದರೆ, ಇದೀಗ ಎಲ್ಲ ಗೊಂದಲಗಳಿಗೆ ಬಿಜೆಪಿ ಹಾಗೂ ಜೆಡಿಎಸ್ ವರಿಷ್ಠರು ತೆರೆ ಎಳೆದಿದ್ದಾರೆ.

ಬಿಜೆಪಿಯಲ್ಲಿ ಮೈಸೂರು ವಿಶ್ವ ವಿದ್ಯಾಲಯ ಸಿಂಡಿಕೇಟ್ ಮಾಜಿ ಸದಸ್ಯ ಇ.ಸಿ. ನಿಂಗರಾಜ್‌ಗೌಡ, ಕಳೆದ ಬಾರಿ ಇದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಬಿ. ನಿರಂಜನಮೂರ್ತಿ ಹಾಗೂ ಜನಪದ ವಿಶ್ವವಿದ್ಯಾಲಯ ಸಿಂಡಿಕೇಟ್ ಮಾಜಿ ಸದಸ್ಯ ಡಾ. ವಸಂತ್ ಕುಮಾರ್ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಇ.ಸಿ. ನಿಂಗರಾಜ್‌ಗೌಡರಿಗೆ ಮಣೆ ಹಾಕಿದೆ. ನಿಂಗರಾಜ್‌ಗೌಡ ಕಳೆದ ವರ್ಷ ನಡೆದ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಚುನಾವಣೆಗೋಸ್ಕರ ಅವರು ಸಾಕಷ್ಟು ತಯಾರಿ ಮಾಡಿಕೊಂಡಿದ್ದರು. ಆದರೆ, ಅಂತಿಮ ಕ್ಷಣದಲ್ಲಿ ಅವರಿಗೆ ಟಿಕೆಟ್ ಕೈತಪ್ಪಿ ಹೋಯಿತು. ಆದರೆ, ಈ ಬಾರಿ ಪಕ್ಷದ ಹೈಕಮಾಂಡ್ ನಿಂಗರಾಜ್‌ಗೌಡರ ಮೇಲೆ ವಿಶ್ವಾಸವಿರಿಸಿ ಟಿಕೆಟ್ ನೀಡಿದೆ.

ಜೆಡಿಎಸ್‌ನಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ, ಜೆಡಿಎಸ್ ಮುಖಂಡ ವಿವೇಕಾನಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಇದೀಗ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರ ಬಿಜೆಪಿ ಪಾಲಾಗಿದ್ದು, ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ನಿರಾಶೆ ಮೂಡಿಸಿದೆ. ಕ್ಷೇತ್ರದಲ್ಲಿ 10,355 ಪುರುಷರು, 8,022 ಮಹಿಳೆಯರು, ಇಬ್ಬರು ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 18,379 ಮತದಾರರು ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net