

ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರದ ಚುಣಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಬಿಜೆಪಿ ಹಿಂದುಳಿದ ಮೋರ್ಚಾ ಉಪಾದ್ಯಕ್ಷರಾಗಿದ್ದ ಡಿ.ಟಿ.ಶ್ರೀನಿವಾಸ್, ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾರ ಪತಿ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಶ್ರೀನಿವಾಸ್ಗೆ ಟಿಕೆಟ್ ಕೈ ತಪ್ಪಿತ್ತು. ಹಾಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ್ದರೂ ಶ್ರೀನಿವಾಸ್ ಮಾತ್ರ ನಿರ್ಧಾರ ಬದಲಿಸಲಿಲ್ಲ.
ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹೊಂದಿ ಪಕ್ಷ ವಿರೋಧಿ ಚಟುವಟಿಕೆ ನಡೆಸಲಾಗಿದೆ ಎಂದು ಪಕ್ಷದಿಂದಲೇ ಶ್ರೀನಿವಾಸ್ರನ್ನು ಉಚ್ಛಾಟಿಸಲಾಗಿದೆ. ಅವರ ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.