

ಬೆಂಗಳೂರು: ಬಡವರಿಗೆ ಸೂರು ಅತ್ಯಂತ ಅವಶ್ಯಕವಾಗಿದೆ. ಹೀಗಾಗಿ ಕ್ಷೇತ್ರದಲ್ಲಿ ಕಡುಬಡವರಿಗಾಗಿಯೇ ಮನೆಗಳನ್ನು ನಿರ್ವಿುಸಲಾಗುತ್ತಿದೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಕೆಂಗೇರಿ, ಗೋಪಾಲನಗರ, ಚಿಕ್ಕೆಲ್ಲೂರು, ಕೊಲ್ಲೂರು, ದೊಡ್ಡಾಲದರಮರ, ಚುಂಚನಕುಪ್ಪೆ ಸೇರಿ ಹಲವು ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದರು.
ಬಡವರಿಗೆ ಸೂರು ಕಲ್ಪಿಸುವ ದೃಷ್ಟಿಯಿಂದ 8 ಗ್ರಾಮಗಳ ವ್ಯಾಪ್ತಿಯಲ್ಲಿ 18 ಸಾವಿರ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಚಿಕ್ಕಲೂರು, ನೆಲಗುಳಿ, ದೇವಗೆರೆಯಲ್ಲಿ ಮನೆಗಳು ಹಂಚಿಕೆಗೆ ಸಿದ್ಧವಾಗಿದೆ ಎಂದರು.
ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೂ ಒತ್ತು ನೀಡಲಾಗಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆಂದು ಸ್ತ್ರೀ ಶಕ್ತಿ ಸಂಘಗಳನ್ನು ಉಚಿತವಾಗಿ ನೋಂದಾಯಿಸಿ, ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಜೆಡಿಎಸ್ ಅಭ್ಯರ್ಥಿ ಯಾವುದಾದರೂ ಒಂದೇ ಒಂದು ಅಭಿವೃದ್ಧಿ ಕಾರ್ಯ ಮಾಡಿದ್ದರೆ ತಿಳಿಸಿ ಎಂದು ಪ್ರಶ್ನಿಸಿದರು.
ಯಶವಂತಪುರದ ಜನತೆ ಯಾರು ಕೆಲಸ ಮಾಡುತ್ತಾರೆ? ಕಷ್ಟಕ್ಕೆ ಯಾರು ಸ್ಪಂದಿಸುತ್ತಾರೆ? ಎಂಬುದನ್ನು ಗಮನಿಸಿ ಮತ ನೀಡುತ್ತಾರೆ. ಕೇವಲ ಕಣ್ಣೀರು ಹಾಕಿದಾಕ್ಷಣ ಕರಗುವುದಿಲ್ಲ. ಅವರು ಬುದ್ಧಿವಂತರಿದ್ದಾರೆ ಎಂದರು.