ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ

oppo_2
ಮದ್ದೂರು ತಾಲೂಕಿನ ಕದಲೀಪುರ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಕದಲೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ಕೊನೆಯ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜೆ ಮಾಡಲಾಯಿತು.
Published on

ಮದ್ದೂರು: ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಶ್ರಾವಣ ಮಾಸದ ಕೊನೆಯ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕದಲೀಪುರ: ತಾಲೂಕಿನ ಕದಲೀಪುರ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಕದಲೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ಮುಂಜಾನೆಯಿಂದಲೇ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಮಹಾ ಮಂಗಳಾರತಿ, ದೇವರಿಗೆ ವಿಶೇಷ ಅಲಂಕಾರ, ಅಭಿಷೇಕ ಸೇರಿದಂತೆ ಇನ್ನಿತರ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಭಕ್ತಾದಿಗಳಿಗೆ ಪುಳಿಯೋಗರೆ, ಬಿಸಿಬೇಳೆಬಾತ್, ಮೊಸರನ್ನ, ಬೆಲ್ಲದ ಅನ್ನ, ಲಾಡು, ಕಾರಬೂಂದಿಯನ್ನು ನೀಡಲಾಯಿತು. ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನ ಅರ್ಚಕ ಕೆ.ನಾರಾಯಣ್ ಅಯ್ಯಂಗಾರ್, ಶ್ರೀ ಕದಲಿ ಲಕ್ಷ್ಮೀವೆಂಕಟೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಶಿವರಾಮ್ ಇದ್ದರು.

ಶ್ರೀ ಉಗ್ರ ನರಸಿಂಹಸ್ವಾಮಿ: ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಉಗ್ರ ನರಸಿಂಹಸ್ವಾಮಿ ದೇವಾಲಯದಲ್ಲಿ ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ದೇವರಿಗೆ ವಿಶೇಷವಾಗಿ ಬೆಣ್ಣೆ ಅಲಂಕಾರವನ್ನು ಮಾಡಲಾಗಿತ್ತು. ವರ್ಷಕ್ಕೆ ಒಮ್ಮೆ ಮಾತ್ರ ಅದು ಕಡೆಯ ಶ್ರಾವಣದ ದಿನದಂದು ಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡುವುದು ವಿಶೇಷ.

ಪಟ್ಟಣ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿ, ಕಾಶಿ ವಿಶ್ವೇಶ್ವರಸ್ವಾಮಿ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net