

ಹನೂರು: ಮಣ್ಣೆತ್ತಿನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಲೈಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶುಕ್ರವಾರ ಮಾದಪ್ಪನಿಗೆ ವಿಶೇಷ ಪೂಜೆ ನೆರವೇರಿತು.
ಬೆಟ್ಟಕ್ಕೆ ಬಂದಿದ್ದ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು. ದೇಗುಲವನ್ನು ವಿವಿಧ ಪುಷ್ಪ ಹಾಗೂ ತಳಿರ- ತೋರಣದಿಂದ ಸಿಂಗಾರ ಮಾಡಲಾಗಿತ್ತು. ಗೋಪುರವನ್ನು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವಂತೆ ಮಾಡಲಾಗಿತ್ತು. ಗುರುವಾರ ಸಂಜೆ 6.30 ರಿಂದ ರಾತ್ರಿ 8.30ರವರೆಗೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಬೇಡಗಂಪಣ ಅರ್ಚಕರು ಮಾದಪ್ಪನಿಗೆ ವಿವಿಧ ಅಭಿಷೇಕ ನೆರವೇರಿಸಿದರು. ಬಳಿಕ ಎಣ್ಣೆಮಜ್ಜನ ಸೇವೆ ನೆರವೇರಿಸಿ ಧೂಪ, ದೀಪದಾರತಿ ಹಾಗೂ ಮಹಾಮಂಗಳಾರತಿ ಬೆಳಗಿಸಲಾಯಿತು.
ಶುಕ್ರವಾರ ಬೇಡಗಂಪಣ ಸರದಿ ಅರ್ಚಕರಿಂದ ದೇವರಿಗೆ ಅಮಾವಾಸ್ಯೆ ವಿಶೇಷ ಪೂಜೆ ನೆರವೇರಿತು. ವಿವಿಧ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗುವ ಮೂಲಕ ಹರಕೆ ಹೊತ್ತವರು ಇಷ್ಟಾರ್ಥ ಸೇವೆ ನೆರವೇರಿಸಿದರು.
ಮುಂಜಾನೆ 3ರಿಂದ 6.30 ರವರೆಗೆ ಸ್ವಾಮಿಗೆ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆ ನೆರವೇರಿಸಲಾಯಿತು. ಉಪವಾಸವಿದ್ದ ಬೇಡಗಂಪಣ ಸರದಿ ಅರ್ಚಕರು ಸತ್ತಿಗೆ, ಸೂರಿಪಾನಿ, ಛತ್ರಿ ಚಾಮರ ಹಾಗೂ ವಾದ್ಯಮೇಳದೊಂದಿಗೆ ದೇಗುಲ ಸಮೀಪದ ನಂದನವನದ ಮಜ್ಜನ ಬಾವಿಗೆ ತೆರಳಿ ಆಗ್ರೋದಕ ಹಾಗೂ ಬಾಯಿಗೆ ಬಟ್ಟೆ ಕಟ್ಟಿಕೊಂಡು ಕರೆದ ಹಾಲಿಗೆ ಪೂಜೆ ಸಲ್ಲಿಸಿ ಮೆರವಣಿಗೆಯಲ್ಲಿ ದೇಗುಲಕ್ಕೆ ತಂದರು. ಬಳಿಕ ಸಂಕಲ್ಪಾದಿ, ಗಣಪತಿ ಪೂಜೆ, ಪಂಚಕಳಸ ಪೂಜೆ, ಏಕವಾರು ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಎಳನೀರು, ಜೇನುತುಪ್ಪ, ಮೊಸರು, ಸಕ್ಕರೆ, ಖರ್ಜೂರ, ದ್ರಾಕ್ಷಿಯ ಮೂಲಕ ಹಾಲಿನ ಅಭಿಷೇಕ ನೆರವೇರಿಸಿದರು.
2ನೇ ಅಭಿಷೇಕದ ವಿಶೇಷ ಪೂಜೆಯಲ್ಲಿ ಮಾದಪ್ಪನಿಗೆ ಅಭಿಷೇಕ ಅರ್ಚನೆ, ಏಕವಾರು ರುದ್ರಾಭಿಷೇಕ, ಸಂಕಲ್ಪ ಬಿಲ್ವಾರ್ಚನೆ, ನವರತ್ನ ಕೀರಿಟಧಾರಣೆಯೊಂದಿಗೆ ಸ್ವಾಮಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿ ಧೂಪಧಾರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸಲಾಯಿತು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು.
ಮೊಳಗಿದ ಜಯಘೋಷ: ಭಕ್ತರು ಹುಲಿವಾಹನ, ರುದ್ರಾಕ್ಷಿವಾಹನ ಹಾಗೂ ಬಸವ ವಾಹನವನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿಸುವ ಮೂಲಕ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಉತ್ಸವ ಮೂರ್ತಿಗಳಿಗೆ ಧನ, ಧಾನ್ಯ ಸೇರಿದಂತೆ ಇತರ ವಸ್ತುಗಳನ್ನು ಎಸೆದು ಉಘೇ ಮಾದಪ್ಪ ಉಘೇ.. ಜೈ ಮಹತ್ ಮಲೆಯಾ ಎಂಬಿತ್ಯಾದಿ ಘೋಷಣೆ ಕೂಗಿದರು.
ಸೇವೆಗಳಲ್ಲಿ ಭಾಗಿ: ಹರಕೆಹೊತ್ತ ಭಕ್ತರು ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜಾ ಹೊಡೆಯುವ ಸೇವೆ ಕೈಗೊಳ್ಳುವುದರ ಮೂಲಕ ಹರಕೆ ತೀರಿಸಿದರು. ಚಾಮರಾಜನಗರ ಸೇರಿದಂತೆ ಮೈಸೂರು, ಬೆಂಗಳೂರು, ಮಂಡ್ಯ ಮೊದಲಾದ ಕಡೆಗಳಿಂದ ಹೆಚ್ಚಿನ ಭಕ್ತರು ಆಗಮಿಸಿದ್ದರು. ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಅನ್ನದಾಸೋಹ, ಕುಡಿಯುವ ನೀರು ಒದಗಿಸಲಾಗಿತ್ತು. ಪೊಲೀಸ್ ಬಂದೋಬಸ್ತ್ ಹಾಗೂ ಭಕ್ತರ ಸಂಖ್ಯೆಗೆ ಅನುಗುಣವಾಗಿ ಬಸ್ ಸೌಕರ್ಯ ಕಲ್ಪಿಸಲಾಗಿತ್ತು.
ಪ್ರಸಾದ ಬಡಿಸಿದ ಕಾರ್ಯದರ್ಶಿ: ಬೆಟ್ಟಕ್ಕೆ ಆಗಮಿಸಿದ ಬಹುತೇಕ ಭಕ್ತರು ದಾಸೋಹ ಭವನಕ್ಕೆ ಆಗಮಿಸಿದ್ದರು. ಈ ವೇಳೆ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಪ್ರಾಧಿಕಾರದ ಕಾರ್ಯದರ್ಶಿ ಎ.ಇ ರಘು ದಾಸೋಹ ಭವನಕ್ಕೆ ತೆರಳಿ ಮೇಲ್ವಿಚಾರಕರಿಂದ ಭಕ್ತರ ಸಂಖ್ಯೆಯ ಬಗ್ಗೆ ಮಾಹಿತಿ ಪಡೆದರಲ್ಲದೆ, ಭಕ್ತರಿಗೆ ನೀಡಲಾಗುವ ಪ್ರಸಾದ ರುಚಿ, ಶುಚಿಯಿಂದ ಕೂಡಿರಬೇಕು ಎಂದು ಸೂಚಿಸಿದರು. ಮಧ್ಯಾಹ್ನ ನಡೆದ ಅನ್ನದಾಸೋಹದಲ್ಲಿ ಸಿಬ್ಬಂದಿ ಜತೆಗೂಡಿ ಭಕ್ತರಿಗೆ ಪ್ರಸಾದ ಬಡಿಸಿದರು. ಈ ಬಗ್ಗೆ ಭಕ್ತರಿಂದ ಮೆಚ್ಚುಗೆ ವ್ಯಕ್ತವಾಯಿತು.