ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿರಿ: ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಸೂಚನೆ

tushar meeting
Published on

ಬೆಂಗಳೂರು: ನಗರದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಬಿಬಿಎಂಪಿ ಆಡಳಿತಗಾರ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಯೋಜನಾ ವಿಭಾಗದಿಂದ ಕೈಗೆತ್ತಿಕೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ನಗರದಲ್ಲಿ ಮೇಲ್ಸೇತುವೆ, ವೈಟ್ ಟಾಪಿಂಗ್, ಹೈಡೆನ್ಸಿಟಿ ಕಾರಿಡಾರ್, ಕೆರೆಗಳು ಸೇರಿ ಹಲವಾರು ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಕಾಮಗಾರಿಗಳನ್ನು ನಿರ್ವಹಿಸಲು ಸ್ಥಳಿಯವಾಗಿ ಎದುರಾಗಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಬೇಗನೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ವೈಟ್ ಟಾಪಿಂಗ್ ಕಾಮಗಾರಿ:

ನಗರದಲ್ಲಿ 901 ಕೋಟಿ ರೂ. ವೆಚ್ಚದಲ್ಲಿ 88 ಕಿ.ಮೀ. ಉದ್ದದ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇವುಗಳು ಎಲ್ಲೆಲ್ಲಿ ಕೈಗೆತ್ತಿಕೊಳ್ಳಲಾಗಿದೆ, ಯಾವ ರಸ್ತೆಯ ಎಷ್ಟು ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಬಾಕಿ ಕೆಲಸದ ಗಡುವು ಬಗ್ಗೆ ಮಾಹಿತಿ ನೀಡಬೇಕು. 694 ಕೋಟಿ ರೂ. ವೆಚ್ಚದಲ್ಲಿ 28 ಪ್ಯಾಕೇಜ್ ಗಳಲ್ಲಿ ಬ್ಲಾಕ್ ಟಾಪಿಂಗ್ ಕಾಮಗಾರಿ ಕೂಡ ಕೈಗೆತ್ತಿಕೊಂಡಿದ್ದು, 21 ಪ್ಯಾಕೇಜ್‌ಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. 5 ಪ್ಯಾಕೇಜ್‌ಗಳು ಟೆಂಡರ್ ಪ್ರಕ್ರಿಯೆಯಲ್ಲಿದ್ದು, ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ರಾಜಕಾಲುವೆ ಕೆಲಸಕ್ಕೆ ವೇಗ ನೀಡಿ:

ಪಾಲಿಕೆಯ ಎಲ್ಲ ವಲಯಗಳಲ್ಲಿ ರಾಜಕಾಲುವೆಗಳ ಅಭಿವೃದ್ಧಿಗಾಗಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಅವುಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ವಿಶ್ವಬ್ಯಾಂಕ್ ಅನುದಾನದಡಿ ಕೈಗೆತ್ತಿಕೊಳ್ಳಬೇಕಿರುವ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ನಿರ್ದೇಶಿಸಿದರು.

ಸಭೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ವಲಯ ಆಯುಕ್ತರಾದ ಕರೀಗೌಡ, ಸ್ನೇಹಲ್, ರಮ್ಯಾ, ಸತೀಶ್, ರಮೇಶ್, ದಿಗ್ವಿಜಯ್ ಬೋಡ್ಕೆ ಉಪಸ್ಥಿತರಿದ್ದರು.

ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಿ:

ಈಜೀಪುರ ಮುಖ್ಯರಸ್ತೆ, ಯಲಹಂಕ ಪೊಲೀಸ್ ಠಾಣೆ ವೃತ್ತ, ಹೊಸಕೆರೆಹಳ್ಳಿ ಜಂಕ್ಷನ್, ಆರ್.ಆರ್.ನಗರ ಪ್ರವೇಶ ದ್ವಾರ ಸೇರಿ ಇನ್ನಿತೆ ಕಡೆಗಳಲ್ಲಿ ಕೈಗೆತ್ತಿಕೊಂಡಿರುವ ಮೇಲ್ಸೇತುವೆ ಕಾಮಗಾರಿಗಳಿಗೆ ವೇಗ ನೀಡಿ ತ್ವರಿತವಾಗಗಿ ಪೂರ್ಣಗೊಳಿಸಬೇಕು. ಈಜೀಪುರ ಮೇಲ್ಸೇತುವೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ತುಷಾರ್ ಗಿರಿನಾಥ್ ಸೂಚಿಸಿದರು.

ನಗರದಲ್ಲಿ ಪ್ರಗತಿಯಲ್ಲಿರುವ ಮೇಲ್ಸೇತುವೆ ಕಾಮಗಾರಿಗಳ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ಕೈಗೊಳ್ಳಬೇಕು. ಕಾಲಮಿತಿಯೊಳಗಾಗಿ ಬಾಕಿ ಕೆಲಸವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

- ಎಂ.ಮಹೇಶ್ವರ್ ರಾವ್, ಬಿಬಿಎಂಪಿ ಮುಖ್ಯ ಆಯುಕ್ತ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net