ಓದಿನ ಜತೆ ಕ್ರೀಡಾಶಕ್ತಿಯನ್ನೂ ಬೆಳೆಸಿಕೊಳ್ಳಬೇಕು

sports
Published on

ಕುಶಾಲನಗರ:

ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡಾ ಆಸಕ್ತಿಯನ್ನೂ ಬೆಳೆಸಿಕೊಂಡು ತಮ್ಮನ್ನು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಸೋಮಪ್ಪ ಹೇಳಿದರು. ಕುಶಾಲನಗರ ತಾಲೂಕು ಕೂಡುಮಂಗಳೂರು( ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಶಾಲಾ ಗ್ರಾಮೀಣ ವಾರ್ಷಿಕ ಕ್ರೀಡೋತ್ಸವ : 2025 ಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆ ಮಕ್ಕಳಲ್ಲಿ ಕ್ರೀಡಾ ಸ್ಫೂರ್ತಿ ಬೆಳೆಸಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಸದೃಢತೆ ಹೆಚ್ಚುತ್ತದೆ. ವಿದ್ಯಾರ್ಥಿ ಹೆಚ್ಚು ಕ್ರಿಯಾಶೀಲ ವ್ಯಕ್ತಿಯಾಗಿ ರೂಪುಗೊಳ್ಳುತ್ತಾನೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಪಠ್ಯ ಚಟುವಟಿಕೆಗಳೊಂದಿಗೆ ಕ್ರೀಡೆ ಹಾಗೂ ಇನ್ನಿತರ ಕ್ರಿಯಾತ್ಮಕ ಚಟುವಟಿಕೆಗಳು, ಇಕೋ ಕ್ಲಬ್, ಎನ್ನೆಸ್ಸೆಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಮೂಲಕ ಪರಿಸರ, ವಿಜ್ಞಾನ ಚಟುವಟಿಕೆಗಳು ಹಾಗೂ ರಾಷ್ಟ್ರೀಯ ಭಾವೈಕ್ಯತೆ ಮತ್ತು ಸೇವಾ ಮನೋಭಾವ ಬೆಳೆಸಲು ಕೈಗೊಂಡಿರುವ ಕಾರ್ಯಗಳು ಶ್ಲಾಘನಾರ್ಹ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದಾಗ ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ ಉತ್ತಮ ಸಾಧನೆ ಗಳಿಸಲು ಸಾಧ್ಯ ಎಂದರು. ಜಿಲ್ಲಾ ಗೈಡ್ಸ್ ಸಂಸ್ಥೆಯ ಸಹಾಯಕ ಆಯುಕ್ತೆ ಸಿ.ಎಂ. ಸುಲೋಚನ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಿಂದ ಉತ್ತಮ ಶಿಸ್ತು- ಸಂಯಮ ಬೆಳೆಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಎ.ಎಂ. ಜವರಯ್ಯ, ಕೂಡುಮಂಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್. ಸುಜಾತ, ಮಂಡಲ ಪಂಚಾಯತಿ ಮಾಜಿ ಅಧ್ಯಕ್ಷ ಕೆ.ಎಸ್.ರಾಜಾಚಾರಿ ಮಾತನಾಡಿದರು.

ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಎನ್.ಸುಜಾತ,

ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ, ಶಾಲಾ ನಾಯಕ ಎಂ.ಗೌತಮ್, ಉಪ ನಾಯಕಿ ಸ್ಪಂದನ, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net