

ಹೊಳೆನರಸೀಪುರ : ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ ಎಂದು ಹೊಳೆನರಸೀಪುರ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಅಭಿಪ್ರಾಯಪಟ್ಟರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಶಾಲಾ ಶಿಕ್ಷಣ ಇಲಾಖೆ ಮತ್ತು ದೊಡ್ಡಕಾಡನೂರು ಜೆಎಸ್‌ಎಸ್ ಪ್ರೌಢಶಾಲೆಯಿಂದ ಪಟ್ಟಣದ ಹೇಮಾವತಿ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಹಳ್ಳಿಮೈಸೂರು ಹೋಬಳಿ ಮಟ್ಟದ 2024-25ನೇ ಸಾಲಿನ ಪ್ರೌಢಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತೀರ್ಪುಗಾರರು ಯಾವುದೇ ತಾರತಮ್ಯವಿಲ್ಲದೆ ತೀರ್ಪುನೀಡುತ್ತಾರೆ. ವಿದ್ಯಾರ್ಥಿಗಳು ಸಹ ಕ್ರೀಡೆಯನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ವಿದ್ಯಾರ್ಥಿಗಳು ಸ್ವೀಕರಿಸಬೇಕು ಎಂದು ಕಿವಿಮಾತು ಹೇಳಿದರು.
ಜೆಎಸ್‌ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಚೌಡಯ್ಯ ಕಟ್ನವಾಡಿ, ಹೊಳೆನರಸೀಪುರದ ಪಟ್ಟಣ ಪೊಲೀಸ್ ಠಾಣೆಯ ಎಎಸ್‌ಐ ಕುಮಾರಸ್ವಾಮಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಹಾಗೂ ಸಂಘಟನಾ ಕಾರ್ಯದರ್ಶಿ ಮಹೇಶ್, ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್, ಕಾರ್ಯದರ್ಶಿ ಕಾಂತರಾಜು, ನಿರ್ದೇಶಕ ಸಂಗಪ್ಪ ರಕ್ಕಸಗಿ, ಸಂಸ್ಕಾರ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಪ್ರೇಮಕುಮಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಹರೀಶ, ಕಾರ್ಯದರ್ಶಿ ಪುಟ್ಟರಾಜು, ಪ್ರೈಮರಿ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಯ್ಯ, ಕರ್ನಾಟದ ರಾಜ್ಯ ನೌಕರರ ಸಂಘದ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯದರ್ಶಿ ಸುಜಾತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.