

ಹನೂರು: ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರ ಜತೆಗೆ ವೃತ್ತಿ ಜೀವನದ ಅವಕಾಶ ಕಲ್ಪಿಸುತ್ತದೆ ಎಂದು ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.
ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮ.ಬೆಟ್ಟದ ಶ್ರೀ ಮಹದೇಶ್ವರ ಪ್ರೌಢಶಾಲೆಯ ಸಹಯೋಗದಲ್ಲಿ 3 ದಿನಗಳ ಕಾಲ ಆಯೋಜಿಸಿರುವ 14-17 ವರ್ಷ ವಯೋಮಿತಿಯ ಮೈಸೂರು ವಿಭಾಗ ಮಟ್ಟದ ಖೋ, ಖೋ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪಠ್ಯ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆಗಳು ಅಷ್ಟೇ ಮುಖ್ಯ. ಇದರಲ್ಲಿ ಕ್ರೀಡೆಗಳು ಬಹು ಮುಖ್ಯವಾದ ಪಾತ್ರವನ್ನು ವಹಿಸುತ್ತವೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸದ ಜತೆಗೆ ಶಿಸ್ತು, ಏಕಾಗ್ರತೆಯನ್ನು ಮೂಡಿಸುತ್ತದೆ. ಇದು ಅಧ್ಯಯನಕ್ಕೂ ಸಹಕಾರಿಯಾಗಲಿದೆ. ಇನ್ನು ಕ್ರೀಡೆ ಸ್ವ ಸಾಮರ್ಥ್ಯವನ್ನು ಪರೀಕ್ಷಿಸಕೊಳ್ಳಲು, ಸೋಲು, ಗೆಲುವನ್ನು ಸ್ವೀಕರಿಸುವುದನ್ನು ಕಲಿಸುತ್ತದೆ. ಕೌಶಲವನ್ನು ವೃದ್ಧಿಸುತ್ತದೆ. ಜತೆಗೆ ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚು ಭಾಗವಹಿಸಿ ಸಾಧನೆ ಮಾಡುವುದರಿಂದ ಭವಿಷ್ಯದಲ್ಲಿ ಉದ್ಯೋಗಾವಕಾಶ ಸಿಗುತ್ತದೆ. ಇದರಿಂದ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಶಾಲಾ ಹಂತದಿಂದಲೇ ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಿಡಿಪಿಐ ಚಂದ್ರಪಾಟೀಲ್, ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಬಿಇಒ ಮಹೇಶ್, ಬಿಆರ್‌ಸಿ ವೆಂಕಟೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ, ಶಿಕ್ಷಕರ ಸಂಘದ ಪದಾಧಿಕಾರಿಗಳು, ದೈಹಿಕ ಶಿಕ್ಷಕರು, ಶ್ರೀ ಮಹದೇಶ್ವರ ಪ್ರೌಢಶಾಲೆಯ ಶಿಕ್ಷಕರು ಇನ್ನಿತರರು ಇದ್ದರು.