ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ

29.Pyp.. 02
Published on

ಪಿರಿಯಾಪಟ್ಟಣ:ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ 2025 -26ನೇ ಸಾಲಿನ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಶಾಲಾ ಸಮಾರಂಭ ಹಾಗೂ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಉತ್ಸಾಹದಿಂದ ಭಾಗವಹಿಸುತ್ತಾರೆ. ಈ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಮಾನಸಿಕ ಸದೃಢತೆಗೆ ಸಹಕಾರಿಯಾಗುತ್ತದೆ ಎಂದರು. ಓದಿನ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಮೈಗೂಡಿಸಿಕೊಳ್ಳಬೇಕು ಎಂದರು.

ಕ್ರೀಡೆಯ ಮೂಲಕ ಸಾಕಷ್ಟು ಪ್ರತಿಭಾವಂತರು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮನ್ನು ಗುರುತಿಸಿಕೊಂಡು ದೇಶಕ್ಕೆ ಆಸ್ತಿಯಾಗಿದ್ದಾರೆ. ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದರೆ ಓದಿನಷ್ಟೇ ಮಹತ್ವ ಮತ್ತು ಗೌರವವನ್ನು ಸಂಪಾದಿಸಲು ಸಾಧ್ಯವಿದೆ. ಅಲ್ಲದೆ ಈ ಮೂಲಕ ಉದ್ಯೋಗವನ್ನು ಕೂಡ ಪಡೆಯಲು ಅವಕಾಶವಿದೆ ಎಂದರು. ಕ್ರೀಡೆಯಲ್ಲಿ ಸೋಲು ಗೆಲುವು ಎಂಬುದು ಸಹಜವಾಗಿದ್ದು, ಗೆದ್ದಾಗ ಹಿಗ್ಗದೆ ಸೋತಾಗ ಕುಗ್ಗದೆ ಸಮಾನ ಮನಸ್ಥಿತಿಯನ್ನು ಕ್ರೀಡಾಪಟುಗಳು ಹೊಂದಿರಬೇಕು ಎಂದರು.

ಕ್ರೀಡಾಕೂಟದ ಸಂಘಟಕರಾದ ನಳಂದ ಇಂಟರ್ ನ್ಯಾಷನಲ್ ಇಂಡಿಪೆಂಡೆಂಟ್ ಪ್ರೀ ಯೂನಿವರ್ಸಿಟಿ ಕಾಲೇಜಿನ ಪ್ರಾಂಶುಪಾಲ ಷಾಜಿ ಆಲುಂಗಲ್ ಜೋಸೆಫ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಕಷ್ಟು ಪ್ರತಿಭೆಗಳಿದ್ದು ಅವಕಾಶ ದೊರೆತಾಗ ಪ್ರದರ್ಶಿಸಬೇಕು ಎಂದರು. ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸ ಜೀವನದ ಒಂದು ಅಂಗವಾಗಿದೆ. ವಿದ್ಯಾರ್ಥಿ ಜೀವನವು ಪುನರಾವರ್ತನೆಯಾಗುವುದಿಲ್ಲ ಆದ್ದರಿಂದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಂಡು ಜೀವನದ ಅಭಿವೃದ್ಧಿಯತ್ತ ಸಾಗಬೇಕು ಎಂದರು.

ಈ ಸಂದರ್ಭದಲ್ಲಿ ಡಿಪಿಬಿಎಸ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್, ದೈಹಿಕ ಶಿಕ್ಷಣ ಪರಿವೀಕ್ಷಕ ರಮೇಶ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಸ್ಟೆಲ್ಲಾ ಮೇರಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಸೋಮಶೇಖರ್, ಖಜಾಂಚಿ ಶ್ರೀನಿವಾಸ್, ನಿರ್ದೇಶಕ ಕುಮಾರ್ ಸೇರಿದಂತೆ ವಿವಿಧ ಕಾಲೇಜಿನ ಕ್ರೀಡಾಪಟುಗಳು ಮತ್ತು ದೈಹಿಕ ಶಿಕ್ಷಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net