ಹಿರಿಯ ನಾಗರಿಕರ ಜೀವನ ಶೈಲಿ ಯುವಜನತೆಗೆ ಮಾದರಿ

udp-4-dc
Published on

ಉಡುಪಿ: ಹಿರಿಯ ನಾಗರಿಕರ ಜೀವನ ಯುವಜನತೆಗೆ ಮಾದರಿಯಾಗಿದೆ. ಬದುಕಿಗೆ ದಾರಿ ಮಾಡಿಕೊಟ್ಟ ಮನೆಯ ಹಿರಿಯರ ಕೊನೆಗಾಲದ ಬದುಕನ್ನು ಹಸನುಗೊಳಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಬುಧವಾರ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್​ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಡೆದ ಕ್ರೀಡಾಕೂಟ ಹಾಗೂ ಸಾಂಸತಿಕ ಸ್ಫರ್ಧೆಗಳಿಗೆ ಬಕೆಟ್​ಗೆ ಬಾಲ್​ ಎಸೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಹಿರಿಯ ನಾಗರಿಕರಿಗೆ ಸಾಮಾಜಿಕ ಭದ್ರತೆ, ಆರ್ಥಿಕ ಭದ್ರತೆ ಹಾಗೂ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರತಿವರ್ಷ ಅ. 1 ರಂದು ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸುತ್ತಿದೆ. ಹಿರಿಯ ನಾಗರಿಕರು ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಜೀವನೋತ್ಸಾಹ ಹೆಚ್ಚುತ್ತದೆ. ಆದ್ದರಿಂದ ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ ಪ್ರತಿಯೊಬ್ಬ ಹಿರಿಯ ನಾಗರಿಕರು ಕ್ರಿಯಾಶೀಲರಾಗಿ ಸಕ್ರಿಯವಾಗಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಪುರುಷೋತ್ತಮ ಮಾತನಾಡಿ, ಹಿರಿಯ ನಾಗರಿಕರನ್ನು ಗೌರವದಿಂದ ಕಾಣುವುದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದೆ. ವೃದ್ಧಾಪ್ಯ ಜೀವನವನ್ನು ಉತ್ತಮ ರೀತಿಯಲ್ಲಿ ಸಾಗಿಸಲು ಅನುವು ಮಾಡಿಕೊಡಬೇಕು ಎಂದರು.
ಲೀಡ್​ ಬ್ಯಾಂಕ್​ ಮ್ಯಾನೆಜರ್​ ಹರೀಶ್​ ಜಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ, ಜಿಲ್ಲಾ ಮಹಿಳಾ ಮಂಡಲದ ಒಕ್ಕೂಟದ ಸರಳ ಕಾಂಚನ್​, ಬ್ರಹ್ಮಾವರ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಉದಯ್​ ಕುಮಾರ್​ ಮತ್ತಿತರರು ಉಪಸ್ಥಿತರಿದ್ದರು.

ಹಿರಿಯ ನಾಗರಿಕರುಗಳಿಗೆ ಕ್ರೀಡಾ ವಿಭಾಗದಲ್ಲಿ ಮ್ಯೂಸಿಕಲ್​ ಚೇರ್​, ಬಿರುಸಿನ ನಡಿಗೆ ಸ್ಪರ್ಧೆ ಹಾಗೂ ಬಕೆಟ್​ನಲ್ಲಿ ಬಾಲ್​ ಎಸೆಯುವ ಸ್ಪರ್ಧೆ, ಗಾಯನ ಸ್ಪರ್ಧೆ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳು ನಡೆದವು. ಈ ಸಂದರ್ಭದಲ್ಲಿ ಹಿರಿಯ ನಾಗರಿಕರುಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಜಿಲ್ಲಾ ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ವಿಶ್ವನಾಥ್​ ಹೆಗ್ಡೆ ಸ್ವಾಗತಿಸಿ, ಗಣನಾಥ್​ ಎಕ್ಕಾರು ನಿರೂಪಿಸಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರತ್ನ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net