

ಗದಗ: ಮಾರ್ಚ 1 ಮತ್ತು 2 ರಂದು ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿರುವ ಗದಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಗಳು ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ನೆರವೇರಿಸಬೇಕೆಂದು ಜಿಲ್ಲಾದಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಗಳು ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೌಕರರ ಸಂಘ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಕ್ರೀಡಾಕೂಟಗಳು ಜರುಗಲಿದ್ದು ಆಸಕ್ತ ನೌಕರರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ನಡೆಯಲಿದ್ದು ಅವುಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕೆಂದರು.
ಸದರಿ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಉತ್ಸುಕತೆಯಿಂದ ಭಾಗವಹಿಸಿ ಕ್ರೀಡಾ ಸ್ಪೂರ್ತಿ ಮೆರೆಯಬೇಕು. ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ರವಿ ಗುಂಜೀಕರ್ ಅವರು ಮಾತನಾಡಿ ಜಿಲ್ಲಾ ಮಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಭಾಗವಹಿಸಿ ರಾಜ್ಯ ಮಟ್ಟದಲ್ಲಿಯೂ ಸಹ ಜಿಲ್ಲೆಗೆ ಕೀರ್ತಿ ತರಬೇಕು. ಕ್ರೀಡೆಯು ನೌಕರರ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಿದ್ದು ಆಸಕ್ತಿಯಿಂದ ಎಲ್ಲ ನೌಕರರು ಪಾಲ್ಗೊಂಡು ಕ್ರೀಡಾ ಕೂಟ ಯಶಸ್ವಿಗೊಳಿಸಬೆಕೆಂದು ಕರೆ ನೀಡಿದರು.
ಸಭೆಯಲ್ಲಿ ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣ, ವೇದಿಕೆ ವ್ಯವಸ್ಥೆ, ಉಪಹಾರದ ವ್ಯವಸ್ಥೆ, ಚರ್ಚಿಸಲಾಯಿತು.
ಸಭೆಯಲ್ಲಿ ಯುವ ಸಬಲೀಕರಣಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ, ತಾಲೂಕು ನೌಕರರ ಸಂಘದ ಅಧ್ಯಕ್ಷರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.