

ಹನಗೋಡು : ಸದೃಢ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಎಂದು ಹುಣಸೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್. ಕೆ. ಮಹದೇವ್ ತಿಳಿಸಿದರು.
ಹನಗೋಡಿನ ಲಕ್ಷ್ಮಣತೀರ್ಥ ವಿದ್ಯಾ ಸಂಸ್ಥೆ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಹಿರಿಯ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ-ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳಿಗೆ ಕ್ರೀಡಾಸಕ್ತಿ ಬೆಳೆಸುವುದು, ಪ್ರೋತ್ಸಾಹ ನೀಡುವುದು ಬಹಳ ಸೂಕ್ತ. ದೈಹಿಕ ಆರೋಗ್ಯದೊಂದಿಗೆ ಮಾನಸಿಕ ದೃಢತೆಗೆ ಆಟೋಟಗಳು ಅತ್ಯವಶ್ಯಕವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಕ್ರೀಡೆಯನ್ನು ಜೀವನದ ಅವಿಭಾಜ್ಯ ಅಂಗವಾಗಿರಿಸಿ ಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಮಕ್ಕಳು ವಿದ್ಯಾಭ್ಯಾಸದ ಜತೆಗೆ, ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ಹೆಚ್ಚು ತೊಡಗಿಸಿಕೊಳ್ಳಬೇಕು. ಕ್ರೀಡಾ ಕ್ಷೇತ್ರದ ಕೋಟಾದ ಅಡಿಯೂ ಸಾಕಷ್ಟು ಉದ್ಯೋಗ ಅವಕಾಶಗಳಿವೆ. ವಿದ್ಯಾರ್ಥಿಗಳು ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಹದೇವ್ ಸಲಹೆ ನೀಡಿದರು.