

ಬೆಟ್ಟದಪುರ: ಚಪ್ಪರದಹಳ್ಳಿ ಗ್ರಾಮದ ಶ್ರೀ ಚಾಮುಂಡೇಶ್ವರಿ ದೇಗುಲದಲ್ಲಿ ಗುರುವಾರ ನೂರಾರು ಭಕ್ತರ ಸಮ್ಮುಖದಲ್ಲಿ ಶ್ರೀಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಜರುಗಿತು.
ಬೆಳಗ್ಗೆ ದೇವಿಯ ಉತ್ಸವ ಮೂರ್ತಿಯನ್ನು ಗ್ರಾಮದ ಕೆರೆಯಲ್ಲಿ ಶುಚಿಗೊಳಿಸಿ, ಗಂಗಾ ಪೂಜೆ ನೆರವೇರಿಸಲಾಯಿತು. ಬಳಿಕ ವಿವಿಧ ಪುಷ್ಪಗಳಿಂದ ಅಲಂಕಾರಗೊಂಡ ಪಲ್ಲಕ್ಕಿ ಮೇಲೆ ಪ್ರತಿಷ್ಠಾಪಿಸಿ ಪೂರ್ಣಕುಂಭ ಹಾಗೂ ಮಂಗಳವಾದ್ಯದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಬಳಿಕ ಮೂಲಸ್ಥಾನವಾದ ದೇವಸ್ಥಾನದಲ್ಲಿ ಉತ್ಸವ ಮೂರ್ತಿಯನ್ನು ಇರಿಸಲಾಯಿತು. ದೇಗುಲದ ಗರ್ಭಗುಡಿಯಲ್ಲಿರುವ ದೇವಿಯ ಮೂರ್ತಿಗೆ ವಿಶೇಷವಾಗಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ಆಗಮಿಸಿದ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ದೇವಿಯಲ್ಲಿ ಪ್ರಾರ್ಥನೆ ಮಾಡಿಕೊಂಡರು.
ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಶ್ರೀ ಚಾಮುಂಡೇಶ್ವರಿ ದೇವಿ ಸೇವಾ ಪ್ರತಿಷ್ಠಾಪನಾ ಟ್ರಸ್ಟ್ ನ ಪದಾಧಿಕಾರಿಗಳು, ಭಕ್ತರು ಇದ್ದರು.