

ಮದ್ದೂರು: ತಾಲೂಕಿನ ವೈದ್ಯನಾಥಪುರ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ವೈದ್ಯನಾಥೇಶ್ವರಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಶ್ರೀ ಮದ್ವಿವ್ಯ ಮಹಾರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ನೆರವೇರಿತು.
ಶ್ರೀ ಕ್ರೋಧಿನಾಮ ಸಂವತ್ಸರದ ಮಾಘ ಮಾಸ, ಕೃಷ್ಣ ಪಕ್ಷ, ಸಪ್ತಮಿ ಬೆಳಗ್ಗೆ 11 ಗಂಟೆಯಿಂದ 11.30ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ವೈದ್ಯನಾಥೇಶ್ವರಸ್ವಾಮಿಯ ಬ್ರಹ್ಮರಥೋತ್ಸವವು ಅದ್ದೂರಿಯಾಗಿ ಜರುಗಿತು. ಸಹಸ್ರಾರು ಭಕ್ತಾದಿಗಳು ರಥೋತ್ಸವಕ್ಕೆ ಸಾಕ್ಷಿಯಾದರು.
ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ರಥವನ್ನು ದೇವಸ್ಥಾನ ಸುತ್ತ ಎಳೆಯುವ ಜತೆಗೆ ಘೋಷಣೆಗಳನ್ನು ಕೂಗುತಾ ಭಕ್ತಿ ಭಾವ ಮೆರೆದರು. ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿತ್ತು. ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು. ಶ್ರೀ ಪ್ರಸನ್ನ ಪಾರ್ವತಿ ವೈದ್ಯನಾಥೇಶ್ವರ ಟ್ರಸ್ಟ್ ವತಿಯಿಂದ ಅನ್ನಸಂತರ್ಪಣೆ ಮಾಡಲಾಗಿತ್ತು.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ರಥೋತ್ಸವದಲ್ಲಿ ಭಾಗವಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮದ್ದೂರಿನಿಂದ ವೈದ್ಯನಾಥಪುರಕ್ಕೆ ಹೆಚ್ಚುವರಿ ಸರ್ಕಾರಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿತ್ತು.