18ರಂದು ಶ್ರೀಲಕ್ಷ್ಮೀ ವೆಂಕಟರಮಣಸ್ವಾಮಿ ಮಹಾರಥೋತ್ಸವ

Published on

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಸುಕ್ಷೇತ್ರ ಮಾಲೇಕಲ್ ಅಮರಗಿರೆ ಶ್ರೀಲಕ್ಷ್ಮೀವೆಂಕಟರಮಣಸ್ವಾಮಿ ಮಹಾರಥೋತ್ಸವ ಜುಲೈ 18ರಂದು ಮಧ್ಯಾಹ್ನ ವಿಜೃಂಭಣೆಯಿಂದ ನೆರವೇರಿಸಲು ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ತಹಸೀಲ್ದಾರ್ ಸಂತೋಷ್ ಕುಮಾರ್ ಶನಿವಾರ ತಿಳಿಸಿದರು.


ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕು ಆಡಳಿತ, ಮುಜರಾಯಿ ಇಲಾಖೆ, ದೇವಾಲಯದ ಅಭಿವೃದ್ಧಿ ಸಮಿತಿ ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿ ಸಂಯುಕ್ತಾಶ್ರಯದಲ್ಲಿ ಪ್ರತಿ ವರ್ಷದಂತೆ ಆಷಾಢ ಮಾಸದಲ್ಲಿ ತಾಲೂಕಿನ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿಯಾಗಿರುವ ಶ್ರೀಲಕ್ಷ್ಮೀ ವೆಂಕಟರಮಣಸ್ವಾಮಿ ಜಾತ್ರಾಮಹೋತ್ಸವವನ್ನು ನಡೆಸಲಾಗುತ್ತದೆ ಎಂದು ಹೇಳಿದರು.


ಜುಲೈ 11ರಂದು ದೇವರಿಗೆ ಪಂಚಾಮೃತ ಅಭಿಷೇಕ, ಗಣಪತಿ ಪೂಜೆಯೊಂದಿಗೆ ಪ್ರಾರಂಭಗೊಂಡು 27ರಂದು ರಾತ್ರಿ ಗರುಡೋತ್ಸವ ನಂತರ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ. ಪ್ರತಿದಿನ ಶ್ರೀದೇವಿ ಭೂದೇವಿ ಸಮೇತನಾದ ಶ್ರೀವೆಂಕಟರಮಣಸ್ವಾಮಿಗೆ ವಿಶೇಷ ಅಭಿಷೇಕ, ಪೂಜಾ ಕಾರ್ಯಕ್ರಮಗಳು ಹಾಗೂ ವಿವಿಧ ಉತ್ಸವಗಳು ನಡೆಯುತ್ತವೆ. ಸಹಸ್ರಾರು ಭಕ್ತರು ಪ್ರತಿನಿತ್ಯ ದೇವಾಲಯಕ್ಕೆ ಆಗಮಿಸಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಜುಲೈ 18ರಂದು ನಡೆಯುವ ಮಹಾ ರಥೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಪಾಲ್ಗೊಳ್ಳುವ ಸಹಸ್ರಾರು ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ದೇವಸ್ಥಾನದ ಅಭಿವೃದ್ಧಿ ಸಮಿತಿ ಸೇವಾ ಕಾರ್ಯದಲ್ಲಿ ತೊಡಗಿದೆ. ದಿವ್ಯಾಂಗರು, ವೃದ್ಧರಿಗೆ ನೇರದರ್ಶನ ಇರಲಿದೆ ಎಂದು ತಿಳಿಸಿದರು.


ಮಹಾ ರಥೋತ್ಸವದಲ್ಲಿ ರಾಜ್ಯ ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ, ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಲೋಕಸಭಾ ಸದಸ್ಯರು. ಜಿಲ್ಲಾ ಉಸ್ತುವಾರಿ ಸಚಿವರು, ಚುನಾಯಿತ ಜನಪ್ರತಿನಿಧಿಗಳನ್ನು ಇನ್ನಿತರ ಗಣ್ಯರನ್ನು ಆಹ್ವಾನಿಸಲಾಗುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುವ ಕಾರಣ ಈ ಬಾರಿ ಜಾತ್ರಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತ ಸಮೂಹ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net