ಶ್ರೀನಿವಾಸಪ್ರಸಾದ್-ಬಿ.ವೈ.ವಿಜಯೇಂದ್ರ ಗೌಪ್ಯ ಮಾತುಕತೆ

10
Published on

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಬಿಜೆಪಿಯ ಹಿರಿಯ ನಾಯಕ, ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಜಯಲಕ್ಷ್ಮೀಪುರಂನ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಪ್ರಸಕ್ತ ರಾಜಕೀಯ ವಿದ್ಯಮಾನ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಕುರಿತು ಉಭಯ ನಾಯಕರು ಗೌಪ್ಯವಾಗಿ ಮಾತುಕತೆ ನಡೆಸಿದ್ದು, ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಲೋಕಸಭಾ ಚುನಾವಣೆ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ವಿ.ಶ್ರೀನಿವಾಸಪ್ರಸಾದ್ ಅವರ ಇಬ್ಬರು ಅಳಿಯಂದಿರಾದ ಡಾ.ಮೋಹನ್ ಮತ್ತು ಹರ್ಷವರ್ಧನ್ ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಜತೆಗೆ ಇನ್ನೂ ಅನೇಕ ನಾಯಕರು ಟಿಕೆಟ್ ಕೇಳುತ್ತಿದ್ದಾರೆ. ವೈದ್ಯರಾಗಿರುವ ಡಾ.ಮೋಹನ್ ಶತಾಯಗತಾಯ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಓಡಾಡುವ ಜತೆಗೆ ನಾನಾ ಸಮಾಜ ಸೇವಾ ಕೆಲಸ ಮಾಡುತ್ತಿದ್ದಾರೆ. ಮತ್ತೊಂದೆಡೆ ನಂಜನಗೂಡು ಕ್ಷೇತ್ರದ ಮಾಜಿ ಶಾಸಕ ಹರ್ಷವರ್ಧನ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಉಭಯ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಿದರೆ ಗೆಲುವು ಸುಲಭವಾಗುತ್ತದೆ ಎನ್ನುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಚುನಾವಣೆಗೆ ನಿಲ್ಲುವುದಿಲ್ಲ ಎಂದು ಶ್ರೀನಿವಾಸಪ್ರಸಾದ್ ಈಗಾಗಲೇ ಘೋಷಣೆ ಮಾಡಿದ್ದು, ಈ ಕಾರಣದಿಂದ ವಿಜಯೇಂದ್ರ ಅವರ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಭೇಟಿ ಬಳಿಕ ಮಾತನಾಡಿದ ಬಿ.ವೈ.ವಿಜಯೇಂದ್ರ, ಮೈಸೂರಿಗೆ ಬಂದಾಗ ಹಿರಿಯ ನಾಯಕ ಶ್ರೀನಿವಾಸಪ್ರಸಾದ್ ಅವರನ್ನು ಭೇಟಿ ಮಾಡುತ್ತಿರುತ್ತೇನೆ. ಅವರು ನನ್ನನ್ನು ನೋಡಿ ಸಂತೋಷವ್ಯಕ್ತಪಡಿಸಿದ್ದಾರೆ. ಅವರಿಂದ ಸಲಹೆ, ಸೂಚನೆಗಳನ್ನು ಪಡೆದಿದ್ದೇನೆ. ಮಾ.17ಕ್ಕೆ ಅವರ ರಾಜಕೀಯ ಜೀವನದಲ್ಲಿ 50 ವರ್ಷಗಳನ್ನು ಪೂರೈಸಲಿದ್ದಾರೆ. ಚಾಮರಾಜನಗರ ಮತ್ತು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ವಿಚಾರವಾಗಿ ಸಲಹೆಗಳನ್ನು ಪಡೆದಿದ್ದೇನೆ. ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವುದರಿಂದ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸೂಕ್ತ ಅಭ್ಯರ್ಥಿ ಕಣಕ್ಕಿಳಿಸುವ ಕೆಲಸವನ್ನು ಪಕ್ಷದ ವರಿಷ್ಠರು ಮಾಡುತ್ತಾರೆ ಎಂದರು.

ಈ ವೇಳೆ ಮಾಜಿ ಶಾಸಕರಾದ ಎಲ್.ನಾಗೇಂದ್ರ, ಸಿ.ಎಸ್.ನಿರಂಜನಕುಮಾರ್, ಗ್ರಾಮಾಂತರ ಘಟಕದ ಬಿಜೆಪಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮಾಜಿ ಮೇಯರ್ ಶಿವಕುಮಾರ್ ಸೇರಿದಂತೆ ಸ್ಥಳೀಯ ನಾಯಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net