

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಹಾಗೂ ಮಠದ ಅವ್ಯವಹಾರಗಳ ಕುರಿತ ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಹೈಕೋರ್ಟ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ರಾಮಚಂದ್ರಾಪುರ ಮಠ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾ.ಉದಯ್ ಲಲಿತ್ ಮತ್ತು ನ್ಯಾ. ವಿನೀತ್ ಸರಣ್ ಅವರಿದ್ದ ಪೀಠ, ಈ ಮಧ್ಯಂತರ ನಿರ್ದೇಶನ ನೀಡಿತು. ಇದೇ ವೇಳೆ, ಮೇಲ್ಮನವಿಯಲ್ಲಿರುವ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಏ.7ಕ್ಕೆ ಮುಂದೂಡಿತು.
ಪ್ರಕರಣವೇನು?: ಮಠದ ಆಡಳಿತದಲ್ಲಿ ಅವ್ಯವಹಾರ ನಡೆಸಿದ ಆರೋಪ ಹಿನ್ನೆಲೆಯಲ್ಲಿ ರಾಘವೇಶ್ವರ ಭಾರತೀ ಶ್ರೀಗಳನ್ನು ಪೀಠಾಧಿಪತಿ ಸ್ಥಾನದಿಂದ ಕೆಳಗಿಸಿ, ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಬೇಕು ಎಂದು ಕೋರಿ ಎದುರ್ಕಳ ಈಶ್ವರ ಭಟ್ ಮತ್ತಿತರರು ಪಿಐಎಲ್ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿತ್ತು. ಮಠಕ್ಕೆ ಆಡಳಿತಾಧಿಕಾರಿ ನೇಮಿಸುವಂತೆ ಅರ್ಜಿದಾರರು ಸಲ್ಲಿಸಿದ್ದ ಮನವಿ ಪರಿಗಣಿಸಿದ್ದ ಸರ್ಕಾರ, ಮಠದ ವಿರುದ್ಧ ಆರೋಪಗಳ ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚನೆ ಮಾಡಿತ್ತು. ಅದನ್ನು ಮಠ ಏಕಸದಸ್ಯ ಪೀಠದಲ್ಲಿ ಪ್ರಶ್ನಿಸಿತ್ತು.