ಮತಗಳಾಗಿ ಪರಿವರ್ತನೆಯಾಗಲ್ಲ 'ಗ್ಯಾರಂಟಿ', ಮಾಜಿ ಸಚಿವ ಬಿ. ಶ್ರೀರಾಮುಲು ಅಭಿಮತ

Published on

ಹುಬ್ಬಳ್ಳಿ: ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳು ಮತಗಳಾಗಿ ಪರಿವರ್ತನೆಯಾಗುತ್ತವೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಆದರೆ, ದೇಶದ ಜನರು ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯ ಸಾಧಿಸಲಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಯಗಳಿಗೆ ಬಿಜೆಪಿ ಮೀಸಲಾತಿ ಹೆಚ್ಚಿಸುವ ಮೂಲಕ ನಮ್ಮ ಪರವಾಗಿ ನಿಂತಿದೆ. ಸಾಕಷ್ಟು ಸವಲತ್ತುಗಳನ್ನು ನೀಡಿದೆ. ಹಾಗಾಗಿ ನಮ್ಮ ಜನರು ಬಿಜೆಪಿಗೆ ಬೆಂಬಲವಾಗಿ ನಿಲ್ಲಲಿದ್ದಾರೆ ಎಂದರು.

ಸಚಿವ ಸಂತೋಷ್ ಲಾಡ್ ಅವರು ಆರೋಪ ಮಾಡುವಾಗ ವಿಚಾರ ಮಾಡಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ಹಾಗೂ ನಾಗೇಂದ್ರ ಅವರ ಮೇಲೆ ಆರೋಪಗಳಿರುವುದು ನಿಮಗೆ ಗೊತ್ತಿಲ್ಲವೆ? ಎಂದು ಪ್ರಶ್ನಿಸಿದ ಶ್ರೀರಾಮುಲು, ಕಾಂಗ್ರೆಸ್ ಸರ್ಕಾರದ ಅರ್ಧ ಡಜನ್ಗೂ ಹೆಚ್ಚು ಸಚಿವರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ. ಆದಾಯ ತೆರಿಗೆ ಹಾಗೂ ಈಡಿಯಿಂದ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಕೋರ್ಟ್ ತೀರ್ಪು ಬರುವವರೆಗೂ ಯಾರನ್ನೂ ಅಪರಾಧಿ ಎನ್ನಲಾಗುವುದಿಲ್ಲ. ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರ್ಪಡೆಯಾಗಿದ್ದರಲ್ಲಿ ತಪ್ಪೇನಿಲ್ಲ ಎಂದು ಸರ್ಮಥಿಸಿಕೊಂಡರು.

ಕಾಂಗ್ರೆಸ್ನಲ್ಲಿರುವ ದುಷ್ಟ ಗುಣಗಳನ್ನು ಪ್ರಿಯಾಂಕ್ ರ್ಖಗೆ ಅಳವಡಿಸಿಕೊಂಡಂತೆ ಕಾಣುತ್ತದೆ. ಹಾಗಾಗಿ ಪದೇಪದೆ ಕೆಟ್ಟ ಬುದ್ದಿಯನ್ನು ಪ್ರದರ್ಶನ ಮಾಡುತ್ತಿರುತ್ತಾರೆ. ಮೊದಲು ಅವರು ತಮ್ಮ ಪಕ್ಷದ ಬಗ್ಗೆ ಅಧ್ಯಯನ ಮಾಡಿ ತಿಳಿದುಕೊಳ್ಳಲಿ ಎಂದ ಶ್ರೀರಾಮುಲು, ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ರ್ಖಗೆ ಅವರು ಸಂದಿಗ್ಧ ಪರಿಸ್ಥಿತಿಗೆ ಸಿಲುಕಿದ್ದಾರೆ.

ಹೀಗಾಗಿ ಕಲಬುರ್ಗಿಯಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ತಮ್ಮ ಅಳಿಯನನ್ನು ಕಣಕ್ಕೆ ಇಳಿಸಿದ್ದಾರೆ. ಅವರ ಸ್ಥಿತಿ ಏನೆಂದು ಪ್ರಿಯಾಂಕ್ ತಿಳಿದುಕೊಳ್ಳಲಿ ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net