ರಾಜಮಾತೆಯಿಂದ ಶ್ರೀರಂಗಪಟ್ಟಣ ದಸರಾ ಉದ್ಘಾಟನೆ: ಹಲವು ವರ್ಷದ ಬಳಿಕ ರಾಜವಂಶಸ್ಥರಿಂದ ಚಾಲನೆ

Srirangapatna dasara logo launch mandya
Published on

ಮಂಡ್ಯ: ಮೈಸೂರು ದಸರಾದಷ್ಟೇ ಪ್ರಾಮುಖ್ಯತೆ ಹೊಂದಿರುವ ಶ್ರೀರಂಗಪಟ್ಟಣ ಪಾರಂಪರಿಕ ದಸರಾ ಆಚರಣೆಗೆ ದಿನಗಣನೆ ಆರಂಭವಾಗಿದೆ. ಮೂರು ದಿನದ ದಸರಾ ಆಚರಣೆಯನ್ನು ರಾಜಮಾತೆ ಪ್ರಮೋದಾದೇವಿ ಒಡೆಯರ್ ಉದ್ಘಾಟಿಸುತ್ತಿರುವುದು ಈ ಬಾರಿಯ ವಿಶೇಷವಾಗಿದೆ.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ದಸರಾ ಲೋಗೋ ಬಿಡುಗಡೆ ಮಾಡಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ ಹಂಚಿಕೊಂಡರು. ಶ್ರೀರಂಗಪಟ್ಟಣ ದಸರಾ ಆಚರಣೆಗೂ ಮೈಸೂರು ರಾಜಮನೆತನವರು ಚಾಲನೆ ನೀಡಿದರು. ಮಾತ್ರವಲ್ಲದೆ ಆ ಸಮಯದಲ್ಲಿ ಅವರೇ ಉದ್ಘಾಟನೆ ಮಾಡುತ್ತಿದ್ದರು. ಆದರೆ ಇತ್ತೀಚಿನ ವರ್ಷದಲ್ಲಿ ರಾಜವಂಶ್ಥರಿಂದ ದಸರಾ ಉದ್ಘಾಟನೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಹಾಗೂ ಜಿಲ್ಲಾಡಳಿತದ ನೇತೃತ್ವದಲ್ಲಿ ರಾಜಮಾತೆ ಅವರನ್ನು ಭೇಟಿ ಮಾಡಿ ಆಹ್ವಾನಿಸಲಾಗಿತ್ತು. ಅದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ವಿವರಿಸಿದರು.

ಅ.16ರಂದು ಮಧ್ಯಾಹ್ನ 3ಗಂಟೆಗೆ ಪ್ರಮೋದಾದೇವಿ ಒಡೆಯರ್ ಅವರು ಉದ್ಘಾಟನೆ ಮಾಡಲಿದ್ದಾರೆ. 18ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈಗಾಗಲೇ ರಾಜ್ಯದಲ್ಲಿ ಮಳೆ ಅಭಾವ ಎದುರಾಗಿದೆ. ರಾಜವಂಶಸ್ಥರಿಂದ ದಸರಾ ಉದ್ಘಾಟನೆಯಾಗಿ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥಿಸಿದ ಅವರು, ನಾಡಿನ ಪರಂಪರೆ ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಬರ ಪರಿಸ್ಥಿತಿಯ ಹಿನ್ನೆಲೆ ಈ ಬಾರಿ ದಸರಾವನ್ನು ಸಂಪ್ರದಾಯವಾಗಿ ಆಚರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಬರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿದ್ದು, ಮೂರು ದಿನ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಮಳೆ ಅಭಾವ, ಕಾವೇರಿ ಸಮಸ್ಯೆ ಇದೆ. ಸಂಘಟನೆಗಳು ಶಾಂತಿಯುತ ಹೋರಾಟ ಮಾಡಬೇಕು. ನಮ್ಮ ಸರ್ಕಾರ ಜನರ ಪರವಾಗಿ ಇದೆ. ಆದ್ದರಿಂದ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ಮಾಡಿಲ್ಲ. ಅಂತೆಯೇ ಕಾವೇರಿ ನೀರಿನ ವಿಚಾರದಲ್ಲಿ ರಾಜಕೀಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವಿರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net