

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಶ್ರೀರಂಗಪಟ್ಟಣ ನಾಡಹಬ್ಬ ದಸರಾ ಮಹೋತ್ಸವವನ್ನು ಅ.16ರಿಂದ ಆಚರಿಸಲಾಗುವುದು. ಆದರೆ ಐದು ಅಥವಾ ಮೂರು ದಿನ ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದಸರಾ ಮಹೋತ್ಸವ ಅಚ್ಚುಕಟ್ಟಾಗಿ ಹಾಗೂ ಪಾರಂಪರಿಕವಾಗಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಬೇಕು ಎಂದರು.
ಅಧಿಕಾರಿಗಳು ಪೂರ್ವಭಾವಿಯಾಗಿ ಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ಜಿಲ್ಲೆಯ ಸಂಸ್ಕೃತಿಯ ಬಗ್ಗೆ ಹೆಚ್ಚಿನ ಕಾರ್ಯಕ್ರಮ ರೂಪಿಸಿ. ಕಿರಂಗೂರು ಬನ್ನಿಮಂಟಪ, ಜಂಬೂ ಸವಾರಿ ಸಾಗುವ ರಸ್ತೆ, ಕಾರ್ಯಕ್ರಮ ನಡೆಯುವ ವೇದಿಕೆ ಸ್ಥಳಗಳನ್ನು ಪರಿಶೀಲನೆ ನಡೆಸಿ ದುರಸ್ತಿ ಕೆಲಸಗಳಿದ್ದಲ್ಲಿ ಪ್ರಾರಂಭಿಸಿ ಬೇಗನೇ ಪೂರ್ಣಗೊಳಿಸಿ. ಶ್ರೀರಂಗಪಟ್ಟಣ ದಸರಾ ನಡೆಯುವ ದಿನಗಳಲ್ಲಿ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಆಕರ್ಷಣೀಯ ದೀಪಾಲಂಕಾರವನ್ನು ನಗರ ಸ್ಥಳೀಯ ಸಂಸ್ಥೆ ಅವರು ಆಯೋಜಿಸಿ ದಸರೆಗೆ ವಿಶೇಷ ಮೆರಗು ನೀಡಬೇಕು. ಮೆರವಣಿಗೆಯಲ್ಲಿ ಪೊಲೀಸ್ ಬ್ಯಾಂಡ್, ಅಶ್ವಪಡೆ ಭಾಗವಹಿಸಲು ವ್ಯವಸ್ಥೆ ಮಾಡಿಕೊಡುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಬೇಕು ಎಂದು ಸೂಚಿಸಿದರು.
ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ದಸರಾ ಮಹೋತ್ಸವವನ್ನು 5 ದಿನ ಆಯೋಜನೆ ಮಾಡುವುದರಿಂದ ರೈತ, ಮಹಿಳಾ, ಮಕ್ಕಳ ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬಹುದು. ಈ ಬಾರಿ ಹೆಚ್ಚಿನ ಅನುದಾನ ನೀಡುವಂತೆ ಸಿಎಂಗೆ ಮನವಿ ಮಾಡಲಾಗಿದ್ದು, ಕೃಷಿ ಸಚಿವರು ಚರ್ಚಿಸುವಂತೆ ಕೋರಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ದಸರಾ ಮಹೋತ್ಸವ ಆಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯ ವಿಧಾನಸಭಾ ಹಾಗೂ ವಿಧಾನ ಪರಿಷತ್ ಶಾಸಕರನ್ನೊಳಗೊಂಡ ಸಂಪೂರ್ಣ ದಸರಾ ಆಚರಣಾ ಸಮಿತಿ, ವೇದಿಕೆ ಸಮಿತಿ, ಸಾಂಸ್ಕೃತಿಕ ಸಮಿತಿ, ಮೆರವಣಿಗೆ, ವಸ್ತು ಪ್ರದರ್ಶನ, ಆರೋಗ್ಯ, ನಗರ ಅಲಂಕಾರ, ಕ್ರೀಡಾ, ಆಹಾರ ಹಾಗೂ ಹಣಕಾಸು ಸಮಿತಿ ರಚಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಶಾಸಕರಾದ ರವಿಕುಮಾರ್ ಗಣಿಗ, ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅರಣ್ಯಾಧಿಕಾರಿ ರುಥ್ರೇನ್ ಇತರರಿದ್ದರು.