ಮಾ.೨೧ರಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ

sslc
Published on

ಮಡಿಕೇರಿ: ಮಾ.೨೧ ರಿಂದ ಏ.೪ ರವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-೧ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಬೆಳಗ್ಗೆ ೧೦ ಗಂಟೆಯಿಂದ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು ೧೭೧ ಶಾಲೆಗಳಿದೆ. ಕೊಡಗು ಜಿಲ್ಲೆಯಲ್ಲಿ ಈ ಬಾರಿ ೬೯೯೭ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ನೋಂದಣಿ ಮಾಡಿದ್ದು, ೬೬೨೨ ಹೊಸ ವಿದ್ಯಾರ್ಥಿಗಳು, ೩೭೫ ಪುನರಾವರ್ತಿತ ಮತ್ತು ಖಾಸಗಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಒಟ್ಟು ೨೭ ಪರೀಕ್ಷಾ ಕೇಂದ್ರಗಳಿದ್ದು, ಮಡಿಕೇರಿ ತಾಲೂಕಿನಲ್ಲಿ ೮, ಸೋಮವಾರಪೇಟೆ ತಾಲೂಕಿನಲ್ಲಿ ೧೧ ಮತ್ತು ವಿರಾಜಪೇಟೆ ತಾಲೂಕಿನಲ್ಲಿ ೮ ಪರೀಕ್ಷಾ ಕೇಂದ್ರಗಳಿವೆ. ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣ, ಶೌಚಾಲಯ, ಕುಡಿಯುವ ನೀರು, ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ಇಂಟರ್‌ನೆಟ್ ಸೌಲಭ್ಯ ಒದಗಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಜಿಲ್ಲೆಯಲ್ಲಿ ಜಾಗೃತ ದಳ ರಚಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಸುಗಮವಾಗಿ ಮತ್ತು ಸುರಕ್ಷಿತವಾಗಿ ಸಾಗಿಸಲು ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ. ಪ್ರತೀ ಮಾರ್ಗಕ್ಕೆ ಒಬ್ಬರಂತೆ ೭ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದ್ದು, ಮಾರ್ಗಾಧಿಕಾರಿಗಳ ವಾಹನ ಭದ್ರತೆಗೆ ಒಬ್ಬರು ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು ಮತ್ತು ಉಪ ಮುಖ್ಯ ಅಧೀಕ್ಷಕರನ್ನು ಹಾಗೂ ಸ್ಥಾನಿಕ ಜಾಗೃತದಳದ ಸಿಬ್ಬಂದಿ ನೇಮಕಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ ೨೦೦ ಮೀಟರ್ ನಿಷೇಧಿತ ಪ್ರದೇಶವಾಗಿದ್ದು, ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಲು ಸೂಚಿಸಲಾಗಿದೆ. ವಿದ್ಯುತ್ ಅಡಚಣೆಯಾಗದಂತೆ ಕ್ರಮ ವಹಿಸಲು ಸೆಸ್ಕಾಂ ಇಲಾಖೆಗೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದ್ದು, ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಲು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಸಮಯಕ್ಕೆ ಸರಿಯಾಗಿ ಹಾಜರಾಗಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಕಲ್ಪಿಸಲು ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕರಿಗೆ ಸೂಚಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿಯನ್ನು ನೇಮಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net