

ಗದಗ: ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನಾನುಕೂಲಗಳು ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಸುಗಮ ಪರಿಕ್ಷೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ದತೆಗಳನ್ನು ಮಾಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ 25 ಸೋಮವಾರದಿಂದ ಗದಗ ಜಿಲ್ಲೆಯಾದ್ಯಂತ ಪ್ರಾರಂಭವಾಗಲಿವೆ. ಜಿಲ್ಲೆಯಲ್ಲಿ ಒಟ್ಟು 60 ಪರೀಕ್ಷಾ ಕೇಂದ್ರಗಳಿದ್ದು 16325 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ ನೂರು ಮೀಟರ್ ಅಂತರದಲ್ಲಿ ಕಲಂ 144 ಜಾರಿಗೊಳಿಸಲಾಗಿದೆ. ಪರೀಕ್ಷೆಗಳನ್ನು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಅಗತ್ಯ ಕ್ರಮ ವಹಿಸಲಾಗಿದೆ.
ಎರಡು ನೂರು ಮೀಟರ್ ಸಮೀಪದ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಹಾಗೂ ಇತರೆ ಬಾಹ್ಯ ವ್ಯಕ್ತಿಗಳು ಸುತ್ತಾಡದಂತೆ ನಿಗಾ ವರಿಸಲು ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ಈ ವರ್ಷ ಸಿಸಿ ಕ್ಯಾಮೆರಾ ಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ ಪರೀಕ್ಷಾ ಕೇಂದ್ರಗಳಲ್ಲಿ ಪಾರದರ್ಶಕ ಹಾಗೂ ಶಿಸ್ತಿನಿಂದ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಸಿಸಿ ಕ್ಯಾಮೆರಾ ನಿಗಾ ವ್ಯವಸ್ಥೆಯನ್ನು ಮಾಡಲಾಗಿದೆ. ಇಂದು ಹೋಳಿ ಆಚರಣೆ ಇರುವುದರಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯನ್ನು ಮಾಡದಂತೆ ಪರೀಕ್ಷಾ ಕೇಂದ್ರಕ್ಕೆ ತೆರಳಲು ಅವಕಾಶ ಮಾಡಿಕೊಡಲು ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.
*ಪರೀಕ್ಷಾರ್ಥಿಗಳಿಗೆ ಬಸ್ ವ್ಯವಸ್ಥೆ:*
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ.ರಾ.ರ.ಸಂಸ್ಥೆ ನಿಗಮವು ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುವ ದಿನಾಂಕಗಳಂದು ಮಾರ್ಚ 25 ರಿಂದ ಎಪ್ರಿಲ್ 6 ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
*ಪರೀಕ್ಷೆ ವೇಳಾಪಟ್ಟಿ*:
ಮಾರ್ಚ 25 ರಂದು ಬೆಳಿಗ್ಗೆ 10-15 ರಿಂದ ಮಧ್ಯಾಹ್ನ 1-30 ರವರೆಗೆ ಪ್ರಥಮ ಭಾಷೆ ; ಮಾರ್ಚ 27 ರಂದು ಬೆಳಿಗ್ಗೆ 10-15 ರಿಂದ 1-30 ರವರೆಗೆ ಸಮಾಜ ವಿಜ್ಞಾನ ; ಮಾರ್ಚ 30 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ವಿಜ್ಞಾನ ; ಎಪ್ರಿಲ್ 2 ರಂದು ಬೆ 10.30 ರಿಂದ ಮ 1.30 ರವರೆಗೆ ಗಣಿತ; ಎಪ್ರಿಲ್ 3 ರಂದು ಬೆ 10.15 ರಿಂದ ಮ 1.30 ರವರೆಗೆ ಅರ್ಥಶಾಸ್ತ್ರ ; ಎಪ್ರಿಲ್ 4 ರಂದು ಬೆಳಿಗ್ಗೆ 10.30 ರಿಂದ ಮ 1.30 ರವರೆಗೆ ತೃತೀಯ ಭಾಷೆ ; ಎಪ್ರಿಲ್ 6 ರಂದು ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.15 ರವರೆಗೆ ದ್ವಿತೀಯ ಭಾಷೆ ಪರೀಕ್ಷೆಗಳು ಜರುಗಲಿವೆ.
*ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ:*
ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ 60 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ 25 ರಿಂದ ಎಪ್ರಿಲ್ 6 ರವರೆಗೆ ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನು ನಿರ್ಬಂಧಿಸಲಾಗಿದೆ.
ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್‍ಸ್ಟಾಲ್ , ಫೋಟೋ ಕಾಪಿಯರ್‍ಗಳನ್ನು ಬಂದ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನು ತರುವುದನ್ನು ನಿಷೇಧಿಸಲಾಗಿದೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರ ಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಗದಗ ಜಿಲ್ಲೆಯಲ್ಲಿ ಪರೀಕ್ಷಾ ಕಾರ್ಯವು ಸುಗಮವಾಗಿ ನಡೆಯಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಜಿಲ್ಲಾಡಳಿತದಿಂದ ಮಾಡಲಾಗಿದೆ. ಪರೀಕ್ಷಾ ಅಕ್ರಮ ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಲಾಗುವುದು.
ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪಂಚಾಯತ್ ಸಿಇಓ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ ಎ ರಡ್ಡೇರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.