ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಿ

DDPI office news 28-7-2024
Published on

ಗದಗ: ಜಿಲ್ಲೆಯಲ್ಲಿ ಅಗಸ್ಟ 2 ರಿಂದ 9ರವರೆಗೆ ಜರುಗುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ-3 ಯನ್ನು ವ್ಯವಸ್ಥಿತವಾಗಿ ಅಚ್ಚುಕಟ್ಟಾಗಿ ನಡೆಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ತಿಳಿಸಿದರು.

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ-3 ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಬೇಕು.  ಜಿಲ್ಲೆಯ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು  ಅಲ್ಲಿ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ  ಜಾರಿಗೊಳಿಸಲಾಗಿದ್ದು ಪರೀಕ್ಷಾ ಅವಧಿಯಲ್ಲಿ ಯಾವುದೇ ಲೋಪ ದೋಷಗಳಾಗದಂತೆ ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ನಿರ್ದೇಶನ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ ಅವರು ಮಾತನಾಡಿ ಎಸ್‍ಎಸ್‍ಎಲ್‍ಸಿ-3  ಪರೀಕ್ಷೆಯು  ಅಗಸ್ಟ 2 ರಿಂದ 9 ರವರೆಗೆ ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು ಒಟ್ಟು 1625 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ. ಜಿಲ್ಲಾ ಕಚೇರಿಯಲ್ಲಿ ವೆಬ್‍ಕಾಸ್ಟಿಂಗ್ ಮೂಲಕ ಎಲ್ಲ ಪರೀಕ್ಷಾ ಕೇಂದ್ರಗಳ ವೀಕ್ಷಣೆ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಎಲ್ಲ ತಾಲೂಕಿನ ಬಿ.ಇ.ಓ ಕಚೇರಿಯಲ್ಲಿ ಸಹ ಸದರಿ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ ಬಂದೋಸಬಸ್ತ, ಮಾರ್ಗಾಧಿಕಾರಿಗಳ ವಾಹನ ವ್ಯವಸ್ಥೆ , ತುರ್ತು ಆರೋಗ್ಯ ತಪಾಸಣೆಗೆ ಸೂಕ್ತ ವ್ಯವಸ್ಥೆ  ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ನಿರ್ಮಲಾ, ಡಯಟ್ ಪ್ರಾಚಾರ್ಯರಾದ  ಜಿ.ಎಲ್. ಬಾರಾಟಕ್ಕೆ  ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net