ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತಾಗಲಿ: ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ

SSLC Exam Pre-Preparation Meeting Mandya
Published on

ಮಂಡ್ಯ: ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಮುಖ್ಯ ಶಿಕ್ಷಕರು ಸಂಪರ್ಕದಲ್ಲಿರಬೇಕು. ಮಾತ್ರವಲ್ಲದೆ ಅವರಲ್ಲಿ ಪರೀಕ್ಷೆಯ ಬಗ್ಗೆ ಭಯವಾಗದಂತೆ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಸಜ್ಜುಗೊಳಿಸಿ. ಯಾವುದಾದರೂ ಪರೀಕ್ಷಾ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೊಂದಲ ಇದ್ದರೆ ಪರಿಹರಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಾ.21ರಿಂದ ಏ.4ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಕೆಲಸಗಳು ಯಾವುದೇ ಲೋಪವಿಲ್ಲದೆ ಪಾರದರ್ಶಕವಾಗಿ ನಡೆಸಿ. ಈ ಬಾರಿ ಒಟ್ಟು 20,469 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 10,661 ಗಂಡು ಹಾಗೂ 9,835 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಜಿಲ್ಲೆಯಲ್ಲಿ ಒಟ್ಟು 62 ಕೇಂದ್ರದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪ್ರತಿ ಕೇಂದ್ರಕ್ಕೆ ಒರ್ವ ಮುಖ್ಯ ಶಿಕ್ಷಕರನ್ನು ಪರೀಕ್ಷಾ ಅಧೀಕ್ಷಕರು ಹಾಗೂ ಪೇಪರ್ ಕಸ್ಟೋಡಿಯನ್, ಪ್ರತಿ ಬ್ಲಾಕ್‌ಗೆ ಒಬ್ಬರು ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಎಲ್ಲ ಕೇಂದ್ರದಲ್ಲಿ ಪರೀಕ್ಷಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಲು ಪರೀಕ್ಷೆ ನಡೆಯುವ ಪ್ರತಿ ಕೊಠಡಿಗೆ ಸಿ.ಸಿ ಕ್ಯಾಮೆರಾ ಅಳವಡಿಸಲಾಗುವುದು. ಪರೀಕ್ಷೆಯ ಚಲನ-ವಲನವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆಯಲಾಗುವ ಕಂಟ್ರೋಲ್ ರೂಂನಲ್ಲಿ ಅಧಿಕಾರಿಗಳನ್ನು ನೇಮಿಸಿ ವೀಕ್ಷಿಸಲಾಗುವುದು ಎಂದು ವಿವರಿಸಿದರು.

ಯಾವುದೇ ವಿದ್ಯಾರ್ಥಿ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಬಾರದು. ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು ಉತ್ತಮ ಬೆಂಚ್ ಮತ್ತು ಡೆಸ್ಕ್ ಇರುವುದನ್ನು ಖಾತ್ರಿ ಪಡಿಸಿಕೊಳ್ಳಿ. ಮಕ್ಕಳಿಗೆ ಕುಡಿಯುವ ನೀರು ಹಾಗೂ ಶೌಚಗೃಹ ವ್ಯವಸ್ಥೆ ಇರುವಂತೆ ಪರೀಕ್ಷಿಸಿಕೊಳ್ಳಿ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಸಹ ಮೊಬೈಲ್ ಅನ್ನು ಪರೀಕ್ಷಾ ಕೊಠಡಿಗಳಿಗೆ ತೆಗೆದುಕೊಂಡು ಹೋಗಬಾರದು ಎಂದು ಸೂಚನೆ ನೀಡಿದರು.

ಪರೀಕ್ಷೆ ನಡೆಯುವ ದಿನದಂದು ಕೆಎಸ್‌ಆರ್‌ಟಿಸಿ ಬಸ್ ಸರಿಯಾದ ಸಮಯದಲ್ಲಿ ನಿಗದಿಪಡಿಸಿರುವ ರೀತಿ ಟ್ರಿಪ್‌ಗಳಲ್ಲಿ ಸಂಚರಿಸಬೇಕು. ಒಟ್ಟಾರೆ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ. ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರ ಇರುವುದಿಲ್ಲ. ಪರೀಕ್ಷೆ ನಡೆಯುವ ದಿನಗಳಂದು ಕೇಂದ್ರದಿಂದ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಈ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ದಿನ ಜೆರಾಕ್ಸ್ ಅಂಗಡಿ ಹಾಗೂ ಸೈಬರ್ ಸೆಂಟರ್ ತೆರೆಯಲು ಅವಕಾಶವಿರುವುದಿಲ್ಲ. ಆರೋಗ್ಯ ಇಲಾಖೆಯಿಂದ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಸಿಬ್ಬಂದಿ ನೇಮಕ ಮಾಡಿ, ಅಗತ್ಯ ಔಷಧ ಹಾಗೂ ಒಆರ್‌ಎಸ್ ವ್ಯವಸ್ಥೆ ಮಾಡಿಕೊಳ್ಳಲು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಇ.ಗಂಗಾಧರಸ್ವಾಮಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ, ಡಯಟ್ ಪ್ರಾಂಶುಪಾಲ ಪುರುಷೋತ್ತಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net