ಕಳಪೆ ಫಲಿತಾಂಶ ಪುನರಾವರ್ತನೆಯಾಗದಿರಲಿ: ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ

SSLC Exam Progress Review Meeting Mandya
Published on

ಮಂಡ್ಯ: ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸುವಂತೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ. ಕಳೆದ ಸಾಲಿನ ಫಲಿತಾಂಶ ಈ ಬಾರಿ ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಜಿಲ್ಲೆ 2023-24ನೇ ಸಾಲಿನ ಪರೀಕ್ಷೆ-1ರಲ್ಲಿ ಶೇ. 74.54, ಪರೀಕ್ಷೆ-2ರಲ್ಲಿ 37.94 ಹಾಗೂ ಪರೀಕ್ಷೆ-3ರಲ್ಲಿ ಶೇ.42.53 ಫಲಿತಾಂಶ ಪಡೆದಿದೆ. ಆದ್ದರಿಂದ ಈ ಬಾರಿ ಉನ್ನತ ಮಟ್ಟದಲ್ಲಿ ಫಲಿತಾಂಶ ಬರುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ನೋಡಲ್ ಅಧಿಕಾರಿಗಳು ತಮಗೆ ದತ್ತು ನೀಡಲಾಗಿರುವ ಶಾಲೆಗಳ ಮುಖ್ಯಸ್ಥರೊಂದಿಗೆ ಪ್ರತಿ ವಾರ ಸಭೆ ನಡೆಸಬೇಕು. ಪ್ರತಿನಿತ್ಯ ಪರಿಹಾರ ಬೋಧನೆ ಹಾಗೂ ವಿಶೇಷ ತರಗತಿ ಶಾಲೆಯಲ್ಲಿ ನಡೆಯುತ್ತಿದೆಯೋ ಇಲ್ಲವೋ ಎಂಬುದರ ಬಗ್ಗೆ ಮೇಲ್ವಿಚಾರಣೆ ನಡೆಸಿ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.

ತಾಲೂಕು ನೋಡಲ್ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿವಾರು ಅವರಿಗೆ ಕಷ್ಟ ಹಾಗೂ ಹಿಂದುಳಿದಿರುವ ವಿಷಯದ ಬಗ್ಗೆ ಪಟ್ಟಿ ಮಾಡಿಕೊಳ್ಳಬೇಕು. ಬಳಿಕ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಿ ಅವರನ್ನು ಮುಖ್ಯ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಬರೆಯುವಂತೆ ಸಿದ್ಧಗೊಳಿಸಬೇಕು. ಶಿಕ್ಷಕರು ಪ್ರತಿ ವಿದ್ಯಾರ್ಥಿಯೂ ತಮ್ಮ ಮಕ್ಕಳೆಂದು ಭಾವಿಸಿ ಬೋಧನೆ ಮಾಡಿ. ತಾವು ತೆಗೆದುಕೊಳ್ಳುವ ಸಂಬಳಕ್ಕೆ ನ್ಯಾಯಯುತ ಹಾಗೂ ಪ್ರಾಮಾಣಿಕತೆಯಿಂದ ತಮ್ಮ ಮನಸಾಕ್ಷಿ ಒಪ್ಪುವ ರೀತಿಯಲ್ಲಿ ಕೆಲಸ ನಿರ್ವಹಿಸಿ ಎಂದು ಸಲಹೆ ನೀಡಿದರು.

ಕಳೆದ ಸಾಲಿನಲ್ಲಿ ಒಂಭತ್ತನೇ ತರಗತಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಫಲಿತಾಂಶವನ್ನು ಉತ್ತಮಪಡಿಸಲು ತಾಲೂಕು ನೋಡಲ್ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಕಳೆದ ಸಾಲಿನ ಫಲಿತಾಂಶದ ಗುಣಮಟ್ಟವನ್ನು ಪರಿಶೀಲಿಸಿ. ಮುಂದಿನ ಶೈಕ್ಷಣಿಕ ಸಾಲಿನ ಫಲಿತಾಂಶವನ್ನು ಉತ್ತಮ ಪಡಿಸಲು ಅಗತ್ಯ ಮಾರ್ಗದರ್ಶನ ನೀಡಬೇಕು. ಕಡಿಮೆ ಸಾಧನೆ ಮಾಡಿರುವ ಶಾಲೆಯನ್ನು ಗುರುತಿಸಿ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಲಾಖೆಯಿಂದ ಸರಬರಾಜು ಆಗಿರುವ ಪರ್ಯಾಯ ಶೈಕ್ಷಣಿಕ ಕಾರ್ಯ ಯೋಜನೆಯಂತೆ ತರಗತಿಗಳ ನಿರ್ವಹಣೆ ಹಾಗೂ ಚಟುವಟಿಕೆಗಳನ್ನು ಪರಿಶೀಲಿಸಬೇಕು ಎಂದರು.

ನಿಧಾನಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆಗಳ ಅಭ್ಯಾಸ, ಮಾಸಿಕ ಪರೀಕ್ಷೆ ನಡೆಸುವುದು ಹಾಗೂ ಪಾಲಕರ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು. ವಿದ್ಯಾರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಅಣಿಗೊಳಿಸಲು ಅಗತ್ಯ ಯೋಜನೆ ರೂಪಿಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಏರ್ಪಡಿಸುವ ಜತೆಗೆ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಲು ಕಾರ್ಯಾಗಾರಗಳನ್ನು ಆಯೋಜಿಸಬೇಕು ಎಂದರು.

ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಎಸ್‌ಎಸ್‌ಎಲ್ಸಿ ಫಲಿತಾಂಶವನ್ನು ಉತ್ತಮಪಡಿಸಲು ತಾಲೂಕು ಮಟ್ಟದಲ್ಲಿ ಶಿಕ್ಷಕರಿಗೆ ಪುನಶ್ಚೇತನ ತರಬೇತಿಯನ್ನು ಈಗಾಗಲೇ ನೀಡಲಾಗಿದೆ. ಕಲಿಕೆಯಲ್ಲಿ ಹಿಂದುಳಿದಿರುವ ಶಾಲೆಗಳಿಗೆ ಸಂಬಂಧಿಸಿದಂತೆ ಪ್ರತಿ ತಿಂಗಳು ಪ್ರಗತಿ ಪರಿಶೀಲನ ಸಭೆಯನ್ನು ನಡೆಸಿ ನೋಡಲ್ ಅಧಿಕಾರಿಗಳು ಕೈಗೊಂಡಿರುವ ಪ್ರಗತಿಯ ಬಗ್ಗೆ ಮಾಹಿತಿ ಒದಗಿಸಬೇಕು ಎಂದರು.

ಡಯಟ್ ವತಿಯಿಂದ ಹಿರಿಯ ಉಪನ್ಯಾಸಕರು ಪ್ರೌಢಶಾಲೆಗೆ ಭೇಟಿ ನೀಡಿ ಶಿಕ್ಷಕರ ಪಾಠ ವೀಕ್ಷಣೆ ಮಾಡಿ ಮಕ್ಕಳ ಕಲಿಕಾ ಪ್ರಗತಿಗಳನ್ನು ಖಾತರಿಪಡಿಸಿಕೊಳ್ಳಿ. ಗುಣಾತ್ಮಕ ಫಲಿತಾಂಶ ಪಡೆದ ಶಾಲೆಗಳ ಶಿಕ್ಷಕರನ್ನು ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನಿಯೋಜಿಸಿ ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು. ಶಾಲಾ ಹಂತದಲ್ಲಿ ನಡೆಸುವ ಘಟಕ ಪರೀಕ್ಷೆ, ಕಿರುಪರೀಕ್ಷೆ, ಮಧ್ಯವಾರ್ಷಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ಸರಣಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಿ ಮಕ್ಕಳ ಸಮಸ್ಯೆಯನ್ನು ಗುರುತಿಸಿ ಉತ್ತಮ ರೀತಿಯಲ್ಲಿ ಪರಿಹಾರ ಬೋಧನೆಯನ್ನು ನಡೆಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಡಿಡಿಪಿಐ ಎಚ್.ಶಿವರಾಮೇಗೌಡ ಸೇರಿದಂತೆ ವಿವಿಧ ತಾಲೂಕಿನ ಬಿಇಒ, ನೋಡೆಲ್ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net