

ವಿಜಯಪುರ: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುಕ್ರವಾರದಿಂದ ಶುಭಾರಂಭಗೊಂಡಿದ್ದು, ಮೊದಲ ದಿನದಂದು ಪ್ರಥಮ ಭಾಷೆ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 41,276 ವಿದ್ಯಾರ್ಥಿಗಳ ಪೈಕಿ 40,187 ವಿದ್ಯಾರ್ಥಿಗಳು ಹಾಜರಾಗಿದ್ದು, 1,089 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲಾದ್ಯಂತ ಸರ್ಕಾರಿ -25, ಅನುದಾನಿತ-61, ಅನುದಾನ ರಹಿತ-45 ಸೇರಿದಂತೆ ಒಟ್ಟು 131 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಪರೀಕ್ಷೆ ಹಿಂದಿನ ದಿನವೇ ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಪರೀಕ್ಷೆ ಆರಂಭಕ್ಕೂ ಮುನ್ನವೇ ಕೇಂದ್ರಗಳ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತಲ್ಲದೇ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಲು ಪರೀಕ್ಷಾ ಕೇಂದ್ರಗಳ ಸಿಬ್ಬಂದಿ ಭಿನ್ನ-ವಿಭಿನ್ನ ಚಟುವಟಿಕೆ ಕೈಗೊಂಡಿದ್ದರು. ವಿದ್ಯಾರ್ಥಿಗಳು ಉತ್ಸಾಹದಿಂದಲೇ ಪರೀಕ್ಷೆಗೆ ಹಾಜರಾದರಲ್ಲದೇ ವಿವಿಧೆಡೆ ಹೂಗುಚ್ಚ ನೀಡಿ, ಆರತಿ ಬೆಳಗಿ ಬರಮಾಡಿಕೊಳ್ಳಲಾಯಿತು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿತ್ತು. ವೆಬ್‌ಕಾಸ್ಟಿಂಗ್ ವ್ಯವಸ್ಥೆಯೂ ಇತ್ತು. ವಿದ್ಯಾರ್ಥಿ ಸ್ನೇಹಿ ವಾತಾವರಣ ನಿರ್ಮಿಸಲಾಗಿತ್ತು. ಯಾವುದೇ ಅಚಾತುರ್ಯ ನಡೆಯದಂತೆ ಮುಂಜಾಗೃತೆ ವಹಿಸಲಾಗಿತ್ತು.
ಕಳೆದೊಂದು ತಿಂಗಳಿನಿಂದ ಪರೀಕ್ಷೆ ತಯಾರಿಗೆ ಸಂಬಂಧಿಸಿದಂತೆ ಸರಣಿ ಸಭೆ ನಡೆಸಿದ್ದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಶುಕ್ರವಾರ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ವಿ.ಬಿ. ದರಬಾರ್ ಶಾಲೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳದೇ, ಗಲಿಬಿಲಿಗೊಳಗಾಗದೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಆತ್ಮಸ್ಥೈರ್ಯ ತುಂಬಿದರು.
ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಘಟ್ಟವಾಗಿರುವುದರಿಂದ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ದೂರಿಗೆ ಆಸ್ಪದೆ ನೀಡದೇ ಪರೀಕ್ಷಾ ನಿಯಮಗಳನ್ನುನಸರಿಸಿ, ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿ ತಮಗೆ ವಹಿಸಿದ ಪರೀಕ್ಷಾ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.
ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿಗಳ ಮಾಹಿತಿ, ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಮೂಲ ಸೌಲಭ್ಯ, ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿಸಿಟಿವಿ ಮತ್ತು ವೆಬ್‌ಕಾಸ್ಟಿಂಗ್ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತಾ ವ್ಯವಸ್ಥೆ ಕುರಿತು ಪರಿಶೀಲಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ಸಹ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ಪಂಚಾಯಿತಿಯ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರ, ಪಿಡಿಜೆ ಪ್ರೌಢ ಶಾಲೆ, ಬಂಜಾರಾ ಪ್ರೌಢಶಾಲೆ ಮತ್ತು ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ, ಬಿಡಿಎ ಸೊಸಾಯಿಟಿ ಬಾಲಕಿಯರ ಶಾಲೆ ಮತ್ತು ಸರ್ಕಾರಿ ಬಾಲಕಿಯರ ಶಾಲೆಗಳ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರ, ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ಹಾಗೂ ಇಂಟರ್ನೆಟ್ ವ್ಯವಸ್ಥೆ ಕುರಿತು ವೀಕ್ಷಿಸಿದರು. ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ಕಾರ್ಯನಿರ್ವಹಿಸುವುದು, ಹೈ-ಸ್ಪೀಡ್ ಇಂಟರ್‌ನೆಟ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳುವುದು, ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವಿ ಸ್ಥಗಿತಗೊಳ್ಳದಂತೆ ನೋಡಿಕೊಳ್ಳುವುದು, ಒಂದು ವೇಳೆ ಸಿಸಿಟಿವಿ ಸ್ಥಗಿತಗೊಂಡಿದ್ದಲ್ಲಿ ತುರ್ತಾಗಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷೆಯಲ್ಲಿ ಯಾವುದೇ ಲೋಪಗಳು ಕಂಡು ಬಂದರೆ ಕೂಡಲೇ ನೇರವಾಗಿ ತಮ್ಮ ಗಮನಕ್ಕೆ ತರುವಂತೆಯೂ ಮತ್ತು ಉದ್ಭವಿಸುವ ಸಮಸ್ಯೆಗಳ ಕುರಿತು ಸ್ಪಷ್ಟನೆ ನೀಡಬೇಕು ಸೂಚನೆ ನೀಡಿದರು.
ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪ ಕಾರ್ಯದರ್ಶಿ ಡಾ. ವಿಜಯಕುಮಾರ ಆಜೂರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಕಿ ಟಿ.ಎಸ್. ಕೊಲ್ಹಾರ ಮತ್ತಿತರರಿದ್ದರು.