

ಬಳ್ಳಾರಿ : ಮೊದಲ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ ನನ್ನ ತವರು ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಹಂತ ಹಂತವಾಗಿ ಅಭಿವೃದ್ಧಿ ಮಾಡಲು ಪಣತೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಹೇಳಿದರು.
ತಾಲೂಕಿನ ದಾಸರ ನಾಗೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ‘ಮನೆ ಬಾಗಿಲಿಗೆ ಸರ್ಕಾರ’ ಎಂಬ ಆಶಯದಂತೆ ಜಿಲ್ಲಾಡಳಿತವು ಜನರ, ಗ್ರಾಮದ ಸಮಸ್ಯೆಗಳನ್ನು ಅರಿತು, ಮೂಲ ಸೌಲಭ್ಯ ಒದಗಿಸುವ ಕುರಿತು ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಬಳ್ಳಾರಿ ತಾಲೂಕಿನ ಡಿ.ನಾಗೇನಹಳ್ಳಿ, ತಂಬ್ರಹಳ್ಳಿ, ಕಾರೇಕಲ್ಲು, ಬ್ಯಾಲಚಿಂತೆ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದರು.
ಜಿಲ್ಲಾಡಳಿತದಿಂದ ಗ್ರಾಮದಲ್ಲಿ ವಯೋವೃದ್ಧರಿಗೆ ಪಿಂಚಣಿ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ತಲುಪುವಲ್ಲಿ ತೊಡಕಾಗುವ ಸಮಸ್ಯೆಗಳನ್ನು ವಿಚಾರಿಸಲಾಗುತ್ತದೆ ಮತ್ತು ಅವುಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ಸೇವೆ, ಶಾಲೆ, ಅಂಗನವಾಡಿ ಕೇಂದ್ರ, ವಿದ್ಯುತ್, ಬಸ್ ಸಂಪರ್ಕ, ಚರಂಡಿ ವ್ಯವಸ್ಥೆ ಸೇರಿದಂತೆ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ದಾಸರ ನಾಗೇನಹಳ್ಳಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ನುಡಿದರು.
ಬಳಿಕ ಸಾರ್ವಜನಿಕರಿಂದ ಸಮಸ್ಯೆಗಳ ಅಹವಾಲು ಸ್ವೀಕಾರ ಮಾಡಿದರು. ಇದೇ ಸಂದರ್ಭದಲ್ಲಿ ಪರಿಹಾರ ಕ್ರಮ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೇ ವೇಳೆ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದರು. ನಂತರದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಆಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಉನ್ನತೀಕರಿಸಿದ ಕೂಸಿನ ಮನೆ ಉದ್ಘಾಟಿಸಿದರು. ಬಳಿಕ ಅಲ್ಲಿನ ಮಕ್ಕಳಿಗೆ ಸಿಹಿ ತಿನಿಸಿ, ಮಕ್ಕಳೊಂದಿಗೆ ಸಂಭ್ರಮಿಸಿದರು.
ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ್, ಸಹಾಯಕ ಆಯುಕ್ತ ಹೇಮಂತ್.ಎನ್., ತಹಸೀಲ್ದಾರ್ ಗುರುರಾಜ್, ತಾಲೂಕು ಪಂಚಾಯತ್ ಇಒ ಮಡಗಿನ ಬಸಪ್ಪ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.