ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ರಾಜ್ಯಪ್ರಶಸ್ತಿ

rpt 1
Published on

ತ್ಯಾಗರ್ತಿ/ರಿಪ್ಪನ್‌ಪೇಟೆ: ರಾಜ್ಯ ಸರ್ಕಾರ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಇಬ್ಬರು ಶಿಕ್ಷಕರು ಪಾತ್ರರಾಗಿದ್ದಾರೆ. ಸಾಗರ ತಾಲೂಕು ತ್ಯಾಗರ್ತಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ವಿಜಯಾನಂದ ರಾವ್ ಮತ್ತು ಹೊಸನಗರ ತಾಲೂಕು ಮಾದಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಫೌಜಿಯಾ ಸರವತ್ ಆಯ್ಕೆಯಾಗಿದ್ದಾರೆ. ಇವರಿಗೆ ಸೆ.5ರಂದು ಬೆಂಗಳೂರಿನಲ್ಲಿ ನೆಡೆಯುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ
ಕಾರ್ಗಲ್‌ನ ವಿಜಯಾನಂದ ರಾವ್ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 5 ವರ್ಷ ಸೇವೆ ಸಲ್ಲಿಸಿ ನಂತರ ಹೊಸನಗರ ತಾಲೂಕಿನ ಕಾರಣಗಿರಿಯಲ್ಲಿ 8 ವರ್ಷ ಸೇವೆ ಸಲ್ಲಿಸಿದ್ದು ತ್ಯಾಗರ್ತಿಯಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸದಾ ಸಂಶೋಧನೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ಮಕ್ಕಳಿಗೂ ಇದರ ಮಾಹಿತಿಗಳನ್ನುನೀಡುತ್ತಾ ಸದಾ ಚಟುಚಟಿಕೆಯಿಂದ ಶಾಲೆಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇವರು ವಿಜ್ಞಾನ ವಿಭಾಗದಲ್ಲಿ ವಿಶೇಷ ಆಸಕ್ತಿ ವಹಿಸಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ತಮ್ಮದೇ ಆದ ವಿಜೂಸ್ ಕ್ಲಾಸಸ್ ಎಂಬ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಿ ಮಕ್ಕಳಿಗೆ ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸುತ್ತಿದ್ದಾರೆ. ಯೂಟ್ಯೂಬ್ ಚಾನಲ್ ಮೂಲಕ ಆಧುನಿಕ ವಿಜ್ಞಾನದ ಬಗ್ಗೆ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ವಿಜ್ಞಾನ ವಿಭಾಗದ ರಾಜ್ಯ ಹಾಗೂ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ 500ಕ್ಕೂ ಹೆಚ್ಚು ತರಬೇತಿಗಳನ್ನು ನೀಡಿದ್ದಾರೆ ಹಾಗೂ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಸೆಮಿನಾರ್‌ಗಳನ್ನು ನಡೆಸಿದ್ದಾರೆ. ಎನ್‌ಇಪಿ ಶಿಕ್ಷಣ ನೀತಿಯನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ಭಾಷಾಂತರಗೊಳಿಸಿದ್ದಾರೆ. ವಿಜ್ಞಾನ ವಿಷಯಕ್ಕೆ ಸಂಬಂಧಪಟ್ಟಂತೆ ಅನೇಕ ಲೇಖನಗಳನ್ನು ರಚಿಸಿದ್ದಾರೆ.
ಫೌಜಿಯಾ ಸರವತ್ ಅವರು ಮಕ್ಕಳಿಗೆ ಸ್ಮಾರ್ಟ್‌ಕ್ಲಾಸ್ ಮೂಲಕ ಹಲವು ಕಾರ್ಯಕ್ರಮ ನೀಡಿದ್ದಾರೆ. ದಾನಿಗಳ ಮೂಲಕ ವಿದ್ಯಾರ್ಥಿಗಳಿಗೆ, ಶಾಲೆಗೆ ಅನೇಕ ಸಾಮಗ್ರಿ ಕೊಡಿಸಿದ್ದಾರೆ. ಫಿಜಾ ಯೂಟ್ಯೂಬ್ ಚಾನಲ್ ಮೂಲಕ ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸಿದ್ದಾರೆ. ಅಲ್ಲದೆ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕಿ, ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net