

ಬೆಳಗಾವಿ: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಸರ್ಕಾರ ಹಗರಣಗಳನ್ನು ಮಾಡುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಗಮನ ವಹಿಸುತ್ತಿಲ್ಲ ಎಂದು ಶಾಸಕ ಅಭಯ ಪಾಟೀಲ ಆರೋಪಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಬೆಳಗಾವಿ ಮಹಾನಗರ ಜಿಲ್ಲಾ ಬಿಜೆಪಿ ಘಟಕದ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಹಗರಣದಲ್ಲಿ ಸಿಲಿಕಿರುವ ಕಾಂಗ್ರೆಸ್ ಸರ್ಕಾರ, ಜನರ ಸಂಕಷ್ಟಗಳನ್ನು ಆಲಿಸುತ್ತಿಲ್ಲ. ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿವೆ. ಜನರಿಗೆ ಬಿಟ್ಟಿ ಗ್ಯಾರಂಟಿ ನೀಡುತ್ತಿರುವುದೇ ಸಾಧನೆ ಎನ್ನುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಖಂಡನಾ ನಿರ್ಣಯ ಕೈಗೊಂಡರು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ ಮಾತನಾಡಿ, ನರೇಂದ್ರ ಮೋದಿ ಪ್ರಧಾನಮಂತ್ರಿಯಾದ ಬಳಿಕ ದೇಶ ಅಭಿವೃದ್ಧಿ ಹೊಂದುತ್ತಿದೆ. 370 ಕಲಂ ರದ್ದು ಮಾಡಿ ಕ್ರಾಂತಿಕಾರಕ ನಿರ್ಣಯ ಕೈಗೊಂಡರು. ಆರ್ಥಿಕತೆಯಲ್ಲಿ ಭಾರತವು ಜಗತ್ತಿನ 5ನೇ ದೊಡ್ಡ ರಾಷ್ಟ್ರವಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ರಾಜ್ಯ ಬಿಜೆಪಿ ಮಾಜಿ ವಕ್ತಾರ ಎಂ.ಬಿ.ಝೀರಲಿ, ಪಾಲಿಕೆ ಸದಸ್ಯ ಹನುಮಂತ ಕೊಂಗಾಲಿ, ಬಿಜೆಪಿ ಮುಖಂಡರಾದ ರಾಜಶೇಖರ ಡೋಣಿ, ಮಂಗೇಶ ಪವಾರ ಇದ್ದರು. ಮಹಾನಗರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷೆ ಗೀತಾ ಸುತಾರ ಅಧ್ಯಕ್ಷತೆ ವಹಿಸಿದ್ದರು.