

ಸೋಮವಾರಪೇಟೆ: ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ತಾಲೂಕು ಘಟಕದ ವತಿಯಿಂದ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶುಕ್ರವಾರ ಚಾಲನೆ ದೊರೆಯಿತು.
ಜಿಲ್ಲಾ ಘಟಕದ ಅಧ್ಯಕ್ಷ ಜನಾರ್ದನ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಸಮಾಜ ಬಲಿಷ್ಠವಾದರೂ, ಆರ್ಥಿಕವಾಗಿ ಹಿಂದೆ ಉಳಿದಿದೆ. ಸಮಾಜ ಬಾಂಧವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು. ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ಸಮಾಜದ ಹಿತ ಕಾಯುವ ಕೆಲಸ ಮಾಡಬೇಕೆಂದರು.
ಬೇಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಭಾಸ್ಕರ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು. ಕ್ರೀಡಾಧ್ಯಕ್ಷ ಕುಶಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮೊಗೇರ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಪಿ.ಕೆ.ವಸಂತ, ರಾಜ್ಯ ಸಮಿತಿ ಉಪಾಧ್ಯಕ್ಷ ಬಿ.ಶಿವಪ್ಪ, ರಾಜ್ಯ ಸಮಿತಿ ಸದಸ್ಯ ಪಿ.ಕೆ.ಚಂದ್ರು, ಜಿಲ್ಲಾ ಸಮಿತಿ ಉಪಾಧ್ಯಕ್ಷ ಬಿ.ಎಂ.ದಾಮೋಧರ್, ಪ್ರಧಾನ ಕಾರ್ಯದರ್ಶಿ ಹರೀಶ, ಉಪ ತಹಸೀಲ್ದಾರ್ ತುಕ್ರಪ್ಪ ಮತ್ತಿತರರು ಇದ್ದರು.